ಕುಶಾಲನಗರ, ಜೂ. 29: ಸ್ವಚ್ಛ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿ ನಾಗರಿಕನ ಪಾತ್ರ ಪ್ರಮುಖವಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ರೂ. 35 ಲಕ್ಷ ವೆಚ್ಚದಲ್ಲಿ ನೂತನವಾಗಿ ಖರೀದಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ತ್ಯಾಜ್ಯ ಸಾಗಾಟ ಟಿಪ್ಪರ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಮರ್ಪಕ ತ್ಯಾಜ್ಯ ವಿಲೇವಾರಿ ಸಂಬಂಧ ಪಟ್ಟಣ ಪಂಚಾಯಿತಿ ಅಳವಡಿಸಿಕೊಂಡಿರುವ ಆಧುನಿಕ ತಂತ್ರಜ್ಞಾನದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪಂಚಾಯಿತಿ ಆಡಳಿತ ಮಂಡಳಿ ಪ್ರತಿನಿಧಿಗಳು ನೂತನ ಟಿಪ್ಪರ್‍ಗೆ ಪೂಜೆ ಸಲ್ಲಿಸಿದರು. ಶಾಸಕ ಅಪ್ಪಚ್ಚು ರಂಜನ್ ಸ್ವತಃ ಟಿಪ್ಪರ್ ಅನ್ನು ಚಲಾಯಿಸುವ ಮೂಲಕ ಚಾಲನೆ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ, ಡಿವೈಎಸ್ಪಿ ಮುರಳೀಧರ್, ಕುಡ ಮಾಜಿ ಅಧ್ಯಕ್ಷ ಬಿ.ಜಿ. ಮಂಜುನಾಥ್, ಪಂಚಾಯಿತಿ ಸದಸ್ಯರು, ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಸೇರಿದಂತೆ ನೌಕರ, ಸಿಬ್ಬಂದಿಗಳು ಇದ್ದರು.

ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕುಶಾಲನಗರ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸಧ್ಯದಲ್ಲಿಯೇ ಬಸ್ ನಿಲ್ದಾಣವನ್ನು ಲೋಕಾರ್ಪಣೆ ಗೊಳಿಸಲು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದರು.