ಸೋಮವಾರಪೇಟೆ, ಜು. 1: ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ ಲಭಿಸುವ ಸಾಲ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕರೆ ನೀಡಿದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಬಜೆಗುಂಡಿ ಗ್ರಾಮದ ಪಾಂಚಜನ್ಯ ಯುವ ಸೇನೆಯ ಆಶ್ರಯದಲ್ಲಿ ಅಲ್ಲಿನ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಿಳೆಯರು ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂಬ ಅಭಿಲಾಷೆಯೊಂದಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಧಾನಿ ಮೋದಿ ಅವರು ಜಾರಿಗೆ ತಂದಿರುವ ಉಜ್ವಲ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಮೂಲಕ ಉಚಿತ ಅನಿಲ ಸೌಲಭ್ಯ ಹೊಂದಿಕೊಳ್ಳಬೇಕು. ಆ ಮೂಲಕ ಹೊಗೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಕೊಡಗು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಮಾತನಾಡಿ, ಈಗಾಗಲೇ 2 ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಹಿಳೆಯರು ಇನ್ನಷ್ಟು ಸಂಘಟಿತರಾದರೆ ಹೆಚ್ಚಿನ ಸೌಲಭ್ಯ ಒದಗಿಸಲಾಗುವದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಾಂಚಜನ್ಯ ಯುವಸೇನೆಯ ಅಧ್ಯಕ್ಷ ಪ್ರಶಾಂತ್ ಮಾತನಾಡಿ, ಮಹಿಳೆಯರು ಇತರ ಖಾಸಗಿ ಸಂಸ್ಥೆಗಳಿಂದ ಅಧಿಕ ಬಡ್ಡಿದರದಲ್ಲಿ ಸಾಲ ಪಡೆದಿದ್ದು, ಮರುಪಾವತಿ ಕಷ್ಟಸಾಧ್ಯವಾಗುತ್ತಿದೆ. ವಾರದ ಎಲ್ಲಾ ದಿನಗಳಲ್ಲೂ ಕೆಲಸಕ್ಕೆ ತೆರಳಿ ಸಾಲ ತೀರಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಡಿಸಿಸಿ ಬ್ಯಾಂಕ್ನಿಂದ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಿರುವದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಬೇಳೂರು ಗ್ರಾ.ಪಂ. ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಡಿಸಿಸಿ ಬ್ಯಾಂಕ್ನ ನೋಡಲ್ ಅಧಿಕಾರಿ ಟಿ.ಎಸ್. ತುಂಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.