ಮಡಿಕೇರಿ, ಜು. 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ಕೇಂದ್ರ ಮತ್ತು ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಾದ್ಯಂತ ತಾ. 13 ರವರೆಗೆ ನಡೆಯಲಿರುವ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮಾತನಾಡಿ, ಕ್ಷಯ ರೋಗವು ಮಾರಕ ರೋಗವಾಗಿದ್ದು, ಇದು ಬರದಂತೆ ಮುನ್ನೆಚ್ಚರಿಕೆ ವಹಿಸುವದು ಅಗತ್ಯ ಎಂದು ಸಲಹೆ ಮಾಡಿದರು. ಕ್ಷಯರೋಗ ನಿರ್ಮೂಲನೆಗೆ ಸರ್ಕಾರ ಹಲವು ಕಾರ್ಯಕ್ರಮ ಹಾಗೂ ಆಂದೋಲನ ಹಮ್ಮಿ ಕೊಂಡಿದೆ. ಆ ನಿಟ್ಟಿನಲ್ಲಿ ಕ್ಷಯರೋಗದ ಬಗ್ಗೆ ಮಾಹಿತಿ ಪಡೆದು, ಆರೋಗ್ಯದಿಂದ ಇರಲು ಪ್ರಯತ್ನಿಸಬೇಕು. ಹಾಗಾದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಎ.ಸಿ. ಶಿವಕುಮಾರ್ ಮಾತನಾಡಿ, ಕ್ಷಯರೋಗ ನಿರ್ಮೂಲನೆಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ಷಯರೋಗ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.

ತಾ.ಪಂ. ಸದಸ್ಯರಾದ ಉಮಾಪ್ರಭು, ಗ್ರಾ.ಪಂ. ಉಪಾಧ್ಯಕ್ಷ ರವಿ ಸೋಮಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ. ಪಾರ್ವತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪಲ್ಲವಿ ಮತ್ತು ಕಕ್ಕಬೆ ಮತ್ತು ಪಾರಾಣೆ ಗ್ರಾ.ಪಂ. ಅಧ್ಯಕ್ಷರು ಭಾಗವಹಿಸಿದ್ದರು.

ಸಮಾರಂಭದಲ್ಲಿ ನರಿಯಂದಡ ಗ್ರಾ.ಪಂ. ಸದಸ್ಯರು, ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಇತರರು ಇದ್ದರು. ಸಮಾರಂಭದ ಅಧ್ಯಕ್ಷತೆಯನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೇಬಿ ಶಿವಪ್ಪ ವಹಿಸಿದ್ದರು.