ಗೋಣಿಕೊಪ್ಪ ವರದಿ, ಜು. 4: ಖಾಸಗಿ ಕೃಷಿ ಕಾಲೇಜು ತೆರೆಯಲು ಅವಕಾಶ ನೀಡದಂತೆ ಕರ್ನಾಟಕ ಕೃಷಿ ವಿಶ್ವವಿದ್ಯಾಲಯ ಕಾಯ್ದೆ 2009 ರ ಸೆಕ್ಷನ್ 7ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದ ಹಿನ್ನೆಲೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕೈಬಿಡಲಾಗಿದೆ.
ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಬಾರದೆಂದು ಜಿಕೆವಿಕೆ ವಿದ್ಯಾರ್ಥಿಗಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದ ಪರಿಣಾಮ ಕರ್ನಾಟಕ ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧ ಕೃಷಿ ಸಚಿವ ಶಿವಶಂಕರ್ ರೆಡ್ಡಿ ವಿವಿಧ ಇಲಾಖೆ ಅಧಿಕಾರಿಗಳು ಜಿಎವಿಕೆ ಕುಲಪತಿ, ಕುಲಸಚಿವರು, ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದರು.
ಮುಂದಿನ ಬಜೆಟ್ನಲ್ಲಿ ಕರ್ನಾಟಕ ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಹಾಲಿ ರೈಟಿಕ್ ಕಾಲೇಜು ಸ್ನಾತಕೋತ್ತರ ಪದವಿ ಪ್ರಾರಂಭಕ್ಕೆ ಅನುಮತಿ ಕೋರಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ರಿಟ್ಗೆ ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದರಂತೆ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.