ಮಡಿಕೇರಿ, ಜು. 11: ಜನಸಂಖ್ಯೆ ಹೆಚ್ಚಾದಷ್ಟು ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಅಭಿಪ್ರಾಯಪಟ್ಟರು.ಜಿಲ್ಲಾ ಆಡಳಿತ ಮತ್ತು ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ, ಭೋಧಕ ಆಸ್ಪತ್ರೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಫ್.ಎಂ. ಕೆ.ಎಂ.ಸಿ. ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ವಯಂ ಸೇವಾ ಸಂಸ್ಥೆಗಳು, ರೋಟರಿ ಕ್ಲಬ್ ಮತ್ತು ಕಿ.ಮ.ಆ.ಸ ತರಬೇತಿ ಕೇಂದ್ರ, ನೆಹರು ಯುವಕ ಕೇಂದ್ರ, ಹಾಗೂ ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯ ಕ್ರಮ”ವನ್ನು ಕಾವೇರಿ ಕಲಾಕ್ಷೇತ್ರದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು ಜನಸಂಖ್ಯೆ ಏರಿಕೆ ಸಮಸ್ಯೆಯಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. (ಮೊದಲ ಪುಟದಿಂದ) ಆದ್ದರಿಂದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಹೆಚ್ಚು ಅರಿವು ಮೂಡಿಸು ವಂತಾಗಬೇಕೆಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಭಾರತದ ಪ್ರಸ್ತುತ ಜನಸಂಖ್ಯೆ 135.42 ಕೋಟಿ ಯಾಗಿದ್ದು ವಿಶ್ವದ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದ್ದು, ವಿಶ್ವದ ಜನಸಂಖ್ಯೆಯ ಶೇ.17.74 ರಷ್ಟು ಜನಸಂಖ್ಯೆ ಭಾರತದಲ್ಲಿದೆ. ಇದೇ ರೀತಿ ಜನಸಂಖ್ಯೆ ಏರಿಕೆಯಾಗುತ್ತಾ ಹೋದರೆ 2050 ಕ್ಕೆ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸುತ್ತದೆ. ಆದ್ದರಿಂದ ಜನಸಂಖ್ಯಾ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಯೋಜನೆಗಳ ಸುರಕ್ಷಿತ ವಿಧಾನಗಳನ್ನು ಅನುಸರಿಸುವಂತಾಗ ಬೇಕೆಂದು ಸಲಹೆ ಮಾಡಿದರು.
ಕೊಡಗು ಜಿಲ್ಲೆಯ ಜನಸಂಖ್ಯೆ ಸಮತೋಲನವಿದ್ದು ಕುಟುಂಬ ಕಲ್ಯಾಣ ಯೋಜನೆಗಳು ಉತ್ತಮವಾಗಿ ಅನುಷ್ಠಾನಗೊಂಡಿರುವದಕ್ಕೆ ನಿದರ್ಶನವಾಗಿದೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ಕಾವೇರಮ್ಮ ಸೋಮಣ್ಣ ಮಾತನಾಡಿ ಏರುತ್ತಿರುವ ಜನಸಂಖ್ಯೆಯಿಂದ ಜಗತ್ತು ನಲುಗುತ್ತಿದೆ. ಹಿಂದಿನ ಕಾಲದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಂಪನ್ಮೂಲವಿರುತ್ತಿತ್ತು. ಅವರಿಗೆ ಯಾವದೇ ತೊಂದರೆ ಇರುತ್ತಿರಲಿಲ್ಲ. ಆದರೆ ಇಂದಿನ ದಿನಗಳಲ್ಲಿ ಏರುತ್ತಿರುವ ಜನಸಂಖ್ಯೆಯಿಂದ ಸಂಪನ್ಮೂಲದ ಕೊರತೆ ಉಂಟಾಗುತ್ತಿದ್ದು ಜನಸಂಖ್ಯಾ ನಿಯಂತ್ರಣ ಇಂದಿನ ಅವಶ್ಯವಾಗಿದೆ ಎಂದರು.
ಜಿ.ಪಂ .ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ ದೇಶದ ಜನಸಂಖ್ಯೆ ಹೆಚ್ಚಾಗುತ್ತಿರುವದರಿಂದ ಉದ್ಯೋಗದ ಸಮಸ್ಯೆ ಹೆಚ್ಚಾಗುತ್ತಿದ್ದು, ಎಲ್ಲರಿಗೂ ಶಿಕ್ಷಣ, ಆರೋಗ್ಯ ಮುಂತಾದ ಅವಶ್ಯಕತೆಗಳನ್ನು ಪೂರೈಸಲು ಕಷ್ಟವಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಏರುತ್ತಿರುವ ಜನಸಂಖ್ಯೆಯಿಂದ ಸಂಪನ್ಮೂಲದ ಕೊರತೆಯಾಗುತ್ತಿದ್ದು, ಇದರಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಆರೋಗ್ಯ ಇಲಾಖೆಯು ನವೀನ ಮಾದರಿಯ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುತ್ತಿದ್ದು, ಈ ಬೆಳವಣಿಗೆಯಿಂದ ಜನಸಂಖ್ಯಾ ನಿಯಂತ್ರಣಕ್ಕೆ ಸಹಕಾರಿಯಾಗಿದೆ ಎಂದರು.
ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮಾತನಾಡಿ ಹದಿಹರೆಯದವರಲ್ಲಿ ಮದುವೆ ವಯಸ್ಸಿನ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಜನಸಂಖ್ಯಾ ನಿಯಂತ್ರಣ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಬೇಕಾಗಿದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ್ ಮಾತನಾಡಿ ಜುಲೈ 11, 1989 ರಿಂದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದು, ‘ನಾಳೆಯ ಸಾರ್ಥಕತೆಯ ಜೀವನಕ್ಕಾಗಿ ಕುಟುಂಬ ಕಲ್ಯಾಣ ಯೋಜನೆಯ ಬಳಕೆ’ ಎಂಬುದು ಪ್ರಸಕ್ತ ವರ್ಷದ ಘೋಷ ವಾಕ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜನಸಂಖ್ಯಾ ನಿಯಂತ್ರಣಾ ಯೋಜನೆಯ ಕಾರ್ಯಕ್ರಮದ ಅನುಷ್ಠಾನದಲ್ಲಿ ಉತ್ತಮ ಕಾರ್ಯರ್ವಹಿಸಿದ ವ್ಶೆದ್ಯರಾದ ಡಾ. ಚೇತನ್, ಶುಶ್ರುಷಕಿಯರಾದ ಆಶಾ, ಸುಶಿಲಾ ಡಿ.ಎಂ, ವನಿತಾ ಹಾಗೂ ಆಶಾ ಕಾರ್ಯಕರ್ತರಾದ ರಮ್ಯ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಪದವಿ ಕಾಲೇಜುಗಳಲ್ಲಿ ನಡೆಸಿದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಅನ್‍ಸೀರ, ಅಮರ್‍ಜಿತ್ ಎಚ್.ಜಿ, ಗಗನಾ ಬಿ.ಬಿ, ದೇವಯ್ಯ, ಸಭಾಸಂರಿನ್ ಇವರುಗಳಿಗೆ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಆರ್.ಸಿ.ಹೆಚ್ ಅಧಿಕಾರಿ ಡಾ. ನೀಲೇಶ್, ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಪಾರ್ವತಿ, ವೈದ್ಯರಾದ ಡಾ. ಮಂಜುನಾಥ್, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಇತರರು ಇದ್ದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಸ್ವಾಗತಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ರಮೇಶ್ ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು.