ಸಿದ್ದಾಪುರ, ಜು. 10: ಸಿದ್ದಾಪುರದ ಗುಹ್ಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾಡಾನೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ಜಿಲ್ಲಾಧಿಕಾರಿಗಳು ಹಾಗೂ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ ಅವರನ್ನು ಭೇಟಿಯಾಗಿ ಕಾಡಾನೆ ಸಮಸ್ಯೆ ಬಗ್ಗೆ ವಿವರಿಸಿದರು. ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಶಾಲಾ ಆವರಣ ದಲ್ಲೇ ಕಾಡಾನೆಗಳು ನಡೆದಾಡುತ್ತಿವೆ. ಇದರಿಂದಾಗಿ ಶಾಲಾ ಮಕ್ಕಳು ಸೇರಿದಂತೆ ಪೋಷಕರು ಭಯಭೀತರಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು
ಈ ಸಂದರ್ಭ ಮಾತನಾಡಿದ ಶಿಕ್ಷಣಾಧಿಕಾರಿ ಗಾಯತ್ರಿ, ಕಾಡಾನೆ ಹಾವಳಿ ಬಗ್ಗೆ ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಶಾಲಾ ಆವರಣದಲ್ಲಿ ಸೋಲಾರ್ ಬೇಲಿ ಅಳವಡಿಸುವ ಬಗ್ಗೆ ಚರ್ಚಿಸಲಾಗಿದೆ. ಮಕ್ಕಳಿಗೆ ಯಾವದೇ ತೊಂದರೆಯಾಗದಂತೆ ನೋಡಿಕೊಳ್ಳ ಲಾಗುವದು ಎಂದರು. ಇದೇ ಸಂದರ್ಭ ಶಾಲಾ ಶಿಕ್ಷಕರು ಕೂಡ ಸಮಸ್ಯೆಯ ಬಗ್ಗೆ ಮನವಿಪತ್ರ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಪ್ರಸನ್ನ ಕುಮಾರಿ, ಶಿಕ್ಷಕರಾದ ಮಣಿಕಂಠ, ರಘು, ತೆರೆಸಿಯಾ, ಮಂಜುಳ, ನೇತ್ರಾವತಿ ಇದ್ದರು.
ಜಿಲ್ಲಾಧಿಕಾರಿ ಶ್ರೀವಿಧ್ಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಎಸ್.ಡಿ.ಎಂ.ಸಿ. ಸಮಿತಿಯ ಪದಾಧಿಕಾರಿಗಳು ಕಾಡಾನೆ ಸಮಸ್ಯೆ ಬಗ್ಗೆ ವಿವರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು, ಈಗಾಗಲೇ ಕಾಡಾನೆಗಳ ಹಾವಳಿ ನಿಯಂತ್ರಿಸುವ ಬಗ್ಗೆ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಲೆಗೆ ರಜೆ ನೀಡಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂದರ್ಭ ಅರಣ್ಯಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭ ಸಿದ್ದಾಪುರ ಗ್ರಾ.ಪಂ. ಸದಸ್ಯ ರೆಜಿತ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟೇಶ್, ಸದಸ್ಯ ದಶರಥ, ಮುತ್ತು ಸೇರಿದಂತೆ ಇನ್ನಿತರರು ಇದ್ದರು.
-ಎ.ಎನ್. ವಾಸು