*ಗೋಣಿಕೊಪ್ಪಲು, ಜು. 12: ಅರುವತ್ತೊಕ್ಕಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಈಗಾಗಲೇ ಶೌಚಾಲಯ ವ್ಯವಸ್ಥೆ, ವಸತಿ ನಿರ್ಮಾಣ ಮೊದಲಾದ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದೆಯೂ ಕೂಡ ಹೆಚ್ಚಿನ ಸೌಲಭ್ಯ ಒದಗಿಸಲಾಗುವದು ಎಂದು ಪಂಚಾಯಿತಿ ಅಧ್ಯಕ್ಷ ತೀತಮಾಡ ಸೋಮಯ್ಯ ಹೇಳಿದರು.
ಸ್ಥಳೀಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಚ್ಛ ಭಾರತ್ ಕಾರ್ಯಕ್ರಮದಡಿಯಲ್ಲಿ ನಡೆದ ಶೌಚಾಲಯ ಬಳಕೆ ಮತ್ತು ಘನ ತ್ಯಾಜ್ಯಗಳ ನಿರ್ವಹಣೆ ಬಗ್ಗೆ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ 1157 ಕುಟುಂಬಗಳಿದ್ದು, ಶೌಚಾಲಯ ಇಲ್ಲದ 28 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಸ್ವಚ್ಛ ಭಾರತ್ ಅಡಿಯಲ್ಲಿ ಧನ ಸಹಾಯ ಮಾಡಲಾಗಿದೆ ಎಂದು ತಿಳಿಸಿದರು.
ಘನ ತ್ಯಾಜ್ಯವನ್ನು ಕರಗಿಸಲು ಕ್ರಮ ಕೈಗೊಳ್ಳಲಾಗಿದೆ. ಜನತೆ ಸ್ವಚ್ಛತೆ ಕಾಪಾಡಲು ಸಹಕರಿಸಬೇಕು ಎಂದು ಸೂಚಿಸಿದರು.
ಬೆಂಗಳೂರಿನ ಸಾಯಿ ತಾಂತ್ರಿಕ ವಿದ್ಯಾಸಂಸ್ಥೆಯ 10 ವಿದ್ಯಾರ್ಥಿಗಳು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಇಂಟರ್‍ನೆಟ್ ಬಳಕೆ ಹಾಗೂ ಸಾರ್ವಜನಿಕರಲ್ಲಿ ಶಿಕ್ಷಣ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.
ಉಪಾಧ್ಯಕ್ಷೆ ರತ್ನಾ ಚಂದ್ರಕುಮಾರ್, ಪಿಡಿಓ ಬಿ.ಬಿ. ಶಂಕರ ನಾರಾಯಣ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಹಾಜರಿದ್ದರು.