ಕುಶಾಲನಗರ, ಜು. 13: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ಸ್ಥಳೀಯ ಎಪಿಸಿಎಂಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ಮಂಜುಳಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಜನಸಂಖ್ಯೆ ಸ್ಫೋಟದಿಂದ ದೇಶದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವದು ಅಗತ್ಯವಾಗಿದೆ. ಜನಸಂಖ್ಯಾ ನಿಯಂತ್ರಣ ಕ್ರಮಗಳ ಬಗ್ಗೆ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಇಲಾಖಾ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ಮಾಹಿತಿ ಒದಗಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖಾ ಸಿಬ್ಬಂದಿಗಳಿಗೆ ಶನಿವಾರಸಂತೆಯ ಶಿಕ್ಷಕ ಜಯಕುಮಾರ್ ಜನಸಂಖ್ಯೆ ನಿಯಂತ್ರಣ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು.

ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಹೆಚ್.ಕೆ. ಶಾಂತಿ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.