ಮಡಿಕೇರಿ, ಜು. 16: ರಾಜ್ಯದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಸರಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲಪಿದ್ದು, ಅಂತಹ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿಕೊಳ್ಳುವ ಮೂಲಕ ಶಾಲೆಗಳನ್ನು ಉಳಿಸಿಕೊಳ್ಳಬೇಕು. 40 ಮಕ್ಕಳಿರುವ ಶಾಲೆಗಳಿಗೆ ಮುಖ್ಯೋಪಾಧ್ಯಾಯರನ್ನು ಹಾಗೂ 100 ಮಕ್ಕಳಿರುವ ಶಾಲೆಗಳಿಗೆ ಹಿರಿಯ ಮುಖ್ಯೋಪಾಧ್ಯಾಯರ ಹುದ್ದೆಯನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಎಸ್‍ಸಿ-ಎಸ್‍ಟಿ ಪ್ರಾಥಮಿಕ ಶಾಲೆ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸಿ. ರಾಜು ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಕೊಠಡಿ ಅಥವಾ ಕಚೇರಿಗಳನ್ನು ಪಡೆದು ಕಾರ್ಯನಿರ್ವಹಿಸುತ್ತಿದ್ದು, ಕೊಡಗು ಜಿಲ್ಲೆಯಲ್ಲೂ ಕಚೇರಿ ನೀಡಲು ಉಪನಿರ್ದೇಶಕರನ್ನು ಕೋರಲಾಗುವದು. ಮುಚ್ಚುವ ಹಂತದಲ್ಲಿರುವ ಶಾಲೆಗಳಿಗೆ ಮಕ್ಕಳನ್ನು ಸೇರಿಸುವಂತೆ ಒತ್ತಾಯಿಸಲಾಗುವದು ಎಂದು ಹೇಳಿದರು.
ಹತ್ತನೇ ತರಗತಿಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ಸಮುದಾಯದ ಮಕ್ಕಳನ್ನು ಗುರುತಿಸಿ ಗೌರವಿಸುವದರೊಂದಿಗೆ ಪ್ರಸಕ್ತ ಸಾಲಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಸಮುದಾಯದ ಏಳಿಗೆಗೆ ದುಡಿಯುತ್ತಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಗುವದು ಎಂದು ಮಾಹಿತಿ ನೀಡಿದರು.
ಸಂಘದ ರಾಜ್ಯಾಧ್ಯಕ್ಷ ವೆಂಕಟೇಶಯ್ಯ ಆ. 5 ರಂದು ಮಡಿಕೇರಿಗೆ ಭೇಟಿ ನೀಡಲಿದ್ದಾರೆ ಎಂದು ಈ ಸಂದರ್ಭ ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಕೆ. ಕುಮಾರ್, ಮಡಿಕೇರಿ ತಾಲೂಕು ಅಧ್ಯಕ್ಷ ಕೃಷ್ಣಪ್ಪ, ಸೋಮವಾರಪೇಟೆ ಘಟಕದ ಪದಾಧಿಕಾರಿ ಎಂ.ಪಿ. ವಸಂತ, ಹೆಚ್.ಪಿ. ಜಯಮ್ಮ ಹಾಜರಿದ್ದರು.