ಮಡಿಕೇರಿ, ಜು. 19: ಸರಕಾರಿ ಪ್ರೌಢಶಾಲೆ ಕಡಗದಾಳು ಇಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೋಲಿಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾನೂನು ಸಾಕ್ಷರತಾ ರಥದ ಮೂಲಕ ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಅವರು ಗಿಡಕ್ಕೆ ನೀರೆರೆದು ಉದ್ಘಾಟಿಸಿದರು. ವಿದ್ಯಾರ್ಥಿಗಳು ಶಾಲಾ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಲು ಕಿವಿಮಾತು ಹೇಳಿದರು. ವಕೀಲೆ ಕೆ.ಎಂ. ಮೀನಾಕುಮಾರಿ ಮಕ್ಕಳ ಹಕ್ಕುಗಳು ಮತ್ತು ಬಾಲನ್ಯಾಯ ಮಂಡಳಿ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಉಪನ್ಯಾಸ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಶಾಲೆಗೆ ಒಂದು ಕಂಪ್ಯೂಟರ್ ಹಾಗೂ ಪೀಠೋಪಕರಣಗಳನ್ನು ಉದಾರವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲಾ ಎಸ್.ಡಿ.ಎಂ.ಸಿ., ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಎಂ.ಜೆ. ಗಂಗಮ್ಮ ಸ್ವಾಗತಿಸಿ, ರೂಪಾ ಗಣಪತಿ ನಿರೂಪಿಸಿದರು. ಕಡಗದಾಳು ಬೊಟ್ಲಪ್ಪ ಯುವಕ ಸಂಘದ ಸ್ಥಾಪನಾ ಅಧ್ಯಕ್ಷ ಹಾಗೂ ಕಾನೂನು ಅರಿವು ಕಾರ್ಯಕ್ರಮದ ಸಂಚಾಲಕ ಬಿ.ಎಸ್. ಜಯಪ್ಪ ವಂದಿಸಿದರು.