ಚೆಟ್ಟಳ್ಳಿ, ಜು. 23: ಶಾಲೆಗಳು ಜೀವನದ ಗುರುಕುಲವಿದ್ದಂತೆ. ವಿದ್ಯಾರ್ಥಿಗಳು ತಮ್ಮ ಪಾಲಿನ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಶಿಸ್ತು, ಸಂಯಮ, ವಿನಯತೆ, ಸರಳತೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಮೇಲ್ವಿಚಾರಕ ಹಾಗೂ ಚೆಟ್ಟಳ್ಳಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ವಿರೂಪಾಕ್ಷ ರೈ ನುಡಿದರು. ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಚೆಟ್ಟಳ್ಳಿ ಪ್ರೌಢಶಾಲೆಯ ಮಂಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ತಿಲಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನವನ್ನು ರೂಢಿಸಿಕೊಳ್ಳಬೇಕು. ಗುರು-ಹಿರಿಯರಿಗೆ ಗೌರವ ನೀಡುವದು. ವ್ಯಕ್ತಿತ್ವದ ಘನತೆಯನ್ನು ರೂಢಿಸಿ ಕೊಳ್ಳುವಂತಾಗಬೇಕು ಎಂದರು.

ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ, ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಪ್ರಶಸ್ತಿಗೆ ಆಯ್ಕೆಗೊಂಡಿರುವ ಚೆಟ್ಟಳ್ಳಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪತ್ರಕರ್ತ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕರುಣ್ ಕಾಳಯ್ಯ ಮಾತನಾಡಿ, ಪತ್ರಿಕಾ ರಂಗದ ವೃತ್ತಿ ಹಾಗೂ ಅನುಭವದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ, ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಚೆಟ್ಟಳ್ಳಿ ಪ್ರೌಢಶಾಲಾ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಹಾಜರಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿ ನಾಯಕರಿಂದ ಪ್ರಮಾಣ ವಚನ ಸ್ವೀಕರಿಸಲಾಯಿತು. ಶಿಕ್ಷಕರಾದ ಮನೋಜ್ ಕುಮಾರ್ ಹಾಗೂ ಪ್ರಸನ್ನ ಅವರು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ದೈಹಿಕ ಶಿಕ್ಷಕ ಪಿ.ಎಸ್. ಮಾಚಯ್ಯ ಸ್ವಾಗತಿಸಿ, ಕನ್ನಡ ಶಿಕ್ಷಕಿ ಸುನಂದಾ ನಿರೂಪಿಸಿ, ಶಾಲಾ ನಾಯಕಿ ರೀನಾ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.