ಸೋಮವಾರಪೇಟೆ, ಜು.30: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ತಾ. 31ರಂದು (ಇಂದು) ಸ್ಥಳೀಯ ಒಕ್ಕಲಿಗರ ಸಮುದಾಯ ಭವನದಲ್ಲಿ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷಾ ಸಪ್ತಾಹ ಜಾಗೃತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಪಿ.ಕೆ. ರವಿ ತಿಳಿಸಿದ್ದಾರೆ.
ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‍ಪಿ, ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು, ನ್ಯಾಯಾಧೀಶರು ಭಾಗವಹಿಸಲಿದ್ದಾರೆ ಎಂದರು.
ರಸ್ತೆ ನಿಯಮಗಳ ಉಲ್ಲಂಘನೆಯಿಂದಾಗಿ ಹಲವಷ್ಟು ಅವಘಡಗಳು ಸಂಭವಿಸುತ್ತಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದರೆ ಹೆಚ್ಚಿನ ಅನಾಹುತಗಳನ್ನು ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ಚಾಲಕರಿಗೆ ಮಾಹಿತಿ ಒದಗಿಸುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ರವಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಈಗಾಗಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ ನಡೆಸಿದ್ದು, ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವದು ಎಂದು ಮಾಹಿತಿ ನೀಡಿದರು.
ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಸಾಮಾಜಿಕ ಕಳಕಳಿ ವೃದ್ಧಿಸುವ ಉದ್ದೇಶದಿಂದ ಈಗಾಗಲೇ 9 ಪ್ರೌಢಶಾಲೆಗಳಲ್ಲಿ ರೋಟರಿ ಕ್ಲಬ್ ವತಿಯಿಂದ ಇಂಟರ್ಯಾಕ್ಟ್, 3 ಕಾಲೇಜುಗಳಲ್ಲಿ ರೋಟರ್ಯಾಕ್ಟ್ ಸಂಸ್ಥೆಗಳನ್ನು ಪ್ರಾರಂಭಿಸಲಾಗಿದೆ ಎಂದು ಪಿ.ಕೆ. ರವಿ ಅವರು ತಿಳಿಸಿದರು.
ಗೋಷ್ಠಿಯಲ್ಲಿ ರೋಟರಿ ಕಾರ್ಯದರ್ಶಿ ನಾಗೇಶ್, ಪದಾಧಿಕಾರಿಗಳಾದ ಭರತ್ ಭೀಮಯ್ಯ, ಎ.ಡಿ. ಶುಭಾಕರ್, ಸದಾನಂದ್, ಯಶವಂತ್ ಅವರುಗಳು ಉಪಸ್ಥಿತರಿದ್ದರು.