ಕುಶಾಲನಗರ, ಆ. 29: ಪ್ರಕೃತಿಯ ಆರಾಧನೆ ಮಾಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡುವದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಕರೆ ನೀಡಿದ್ದಾರೆ. ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ಮಹಾ ಆರತಿ ಬಳಗದ ವತಿಯಿಂದ ನಡೆದ 84ನೇ ಮಹಾಆರತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನದಿ ಪರಿಸರಗಳನ್ನು ಅತಿಯಾಗಿ ಬಳಕೆ ಮಾಡುವದರೊಂದಿಗೆ ಪ್ರಾಕೃತಿಕ ವಿಕೋಪಕ್ಕೆ ಆಹ್ವಾನ ನೀಡಿದಂತಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ನಡೆದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಜನರಿಗೆ ಸಹಾಯಹಸ್ತ ನೀಡುವ ಮೂಲಕ ಮಾನವೀಯತೆ ಮೆರೆಯಬೇಕೆಂದರು. ಈ ಸಂದರ್ಭ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಾಚರಣಿಯಂಡ ಪಿ. ಅಪ್ಪಣ್ಣ, 9 ದಶಕಗಳ ಹಿಂದೆ ಇಂತಹ ಅನಾಹುತಗಳು ಜಿಲ್ಲೆಯಲ್ಲಿ ಕಂಡುಬಂದಿರುವ ಬಗ್ಗೆ ನೆನಪಿಸಿದರು. ಪ್ರಾಕೃತಿಕ ಸಂಪತ್ತಿಗೆ ಧಕ್ಕೆಯಾಗದಂತೆ ಎಚ್ಚರವಹಿಸುವ ಮೂಲಕ ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಸಾಧ್ಯ ಎಂದರು.

ಮಹಾ ಆರತಿ ಅಂಗವಾಗಿ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕ ಕೃಷ್ಣಮೂರ್ತಿ ಭಟ್ ಕಾವೇರಿ ಅಷ್ಟೋತ್ತರ, ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಇದೇ ಸಂದರ್ಭ ಕುಶಾಲನಗರದಲ್ಲಿ ನದಿ ಪ್ರವಾಹ ಮತ್ತು ಮಡಿಕೇರಿ, ಸೋಮವಾರಪೇಟೆ ವ್ಯಾಪ್ತಿಯಲ್ಲಿ ನಡೆದ ಭೂಕುಸಿತದಂತಹ ಘಟನೆಗಳು ಮರುಕಳಿಸದಂತೆ ಕೋರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕುಶಾಲನಗರ ಪಟ್ಟಣ, ಕೊಪ್ಪ ವ್ಯಾಪ್ತಿಯಲ್ಲಿ ನದಿ ಪ್ರವಾಹದಿಂದ ವಿವಿಧ ಬಡಾವಣೆಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಶಾಲನಗರ ಪ.ಪಂ. ಕಾರ್ಮಿಕರನ್ನು ಬಳಗದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಲಾಯಿತು.

ಈ ಸಂದರ್ಭ ಕುಶಾಲನಗರ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷರಾದ ವಿ.ಎನ್. ವಸಂತಕುಮಾರ್, ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಟ್ರಸ್ಟ್ ಮಾಜಿ ಅಧ್ಯಕ್ಷ ಕೆ.ಆರ್. ಶಿವಾನಂದನ್, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಬಿಜೆಪಿ ನಗರಾಧ್ಯಕ್ಷ ಕೆ.ಜಿ. ಮನು, ಉದ್ಯಮಿಗಳಾದ ವಿ.ಡಿ. ಪುಂಡರೀಕಾಕ್ಷ, ಉಮಾಶಂಕರ್, ಸ್ಥಳೀಯ ಮಹಿಳಾ ಭಜನಾ ಮಂಡಳಿ ಸದಸ್ಯರು ಮತ್ತು ಬಳಗದ ಪ್ರಮುಖರು ಇದ್ದರು.