ಮಡಿಕೇರಿ, ಸೆ. 6: ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ತಾ. 8 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ತಿಳಿಸಿದ್ದಾರೆ.
ನಗರದ ನ್ಯಾಯಾಲಯ ಕಚೇರಿ ಸಭಾಂಗಣದಲ್ಲಿ ಲೋಕ ಅದಾಲತ್ ಏರ್ಪಡಿಸುವ ಕುರಿತು ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಲೋಕ ಅದಾಲತ್ನಲ್ಲಿ ಬಾಕಿ ಇರುವ ಹಾಗೂ ರಾಜಿ ಆಗುವಂತಹ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮುಂದಾಗಬೇಕಿದೆ. ಎಲ್.ಐ.ಸಿ, ಎಂ.ವಿ.ಸಿ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಬಗೆಹರಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ರಾಜಿಯಾಗುವಂತಹ ಕ್ರಿಮಿನಲ್ ಪ್ರಕರಣಗಳು 875, ಚೆಕ್ ಅಮಾನ್ಯ ಪ್ರಕರಣಗಳು 3501 ಮತ್ತು ಸಿವಿಲ್ ಪ್ರಕರಣಗಳು 1,038 ಒಟ್ಟು 5,414 ಪ್ರಕರಣಗಳು ಇತ್ಯರ್ಥ ಪಡಿಸಬಹುದಾಗಿದೆ ಎಂದು ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಮಾಹಿತಿ ನೀಡಿದರು.
ಜಿಲ್ಲೆಯ ವಿವಿಧ ನ್ಯಾಯಾಲಯ ಗಳಲ್ಲಿ ಬಾಕಿ ಇರುವ 385, ವ್ಯಾಜ್ಯ ಪೂರ್ವ ಪ್ರಕರಣಗಳು 447. ಒಟ್ಟು 832 ಪ್ರಕರಣಗಳನ್ನು ಗುರುತಿಸಲಾ ಗಿದ್ದು, ಇವುಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸ ಬಹುದಾಗಿದೆ. ಹಾಗೆಯೇ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಬ್ಯಾಂಕ್ ಸಂಬಂಧಿಸಿದ 338 ಎ.ಐ.ಆರ್. ಸಂಬಂಧಿಸಿದ 55, ಬಿಎಸ್ಎನ್ಎಲ್ 48 ಮತ್ತು ಇತರೆ 6, ಒಟ್ಟು 447 ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು.
ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ. ಪವನೇಶ್ ಅವರು ಮಾತನಾಡಿ ಸಾಧ್ಯವಾದಷ್ಟು ಮಧ್ಯಸ್ಥಿಕೆ ಅಥವಾ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನಿಸುವಂತಾಗಬೇಕು ಎಂದು ಕೋರಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್ ಮಾತನಾಡಿ ರಾಜಿಯಾಗುವಂತಹ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಂಬಂಧ ಪ್ರಕರಣಗಳನ್ನು ಗುರುತಿಸಬೇಕಿದೆ. ನಂತರ ಇತ್ಯರ್ಥಪಡಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಮಾತನಾಡಿ ಮಧ್ಯಸ್ಥಿಕೆ ಮೂಲಕ ಪ್ರಕರಣ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಕೋರಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ವಕೀಲ ಡಿ.ಎನ್. ದೇವಯ್ಯ, ಸರ್ಕಾರಿ ಅಭಿಯೋಜಕ ಶ್ರೀಧರ ನಾಯರ್ ಲೋಕಾದಲತ್ ಸಂಬಂಧ ಹಲವು ಸಲಹೆ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್. ಜಯಪ್ಪ ಅವರು ಹಲವು ಮಾಹಿತಿ ನೀಡಿದರು.