ಕುಶಾಲನಗರ, ಸೆ. 5: ರಾಜ್ಯ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿ ನಿಧಿ ವತಿಯಿಂದ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೈಜ್ಞಾನಿಕ ಕ್ಷೇತ್ರದ ಸಾಧನೆಗೆ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಅವರಿಗೆ ವಿಜ್ಞಾನ ವಿಶೇಷ ಶಿಕ್ಷಕ ಪ್ರಶಸ್ತಿ, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕರಾದ ಕೆ.ಎನ್. ಮಂಜುನಾಥ್ ಹಾಗೂ ಮುಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸಿ.ಎಸ್.ಸತೀಶ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.

ಶಿಕ್ಷಣ ಮಂತ್ರಿ ಎನ್.ಮಹೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಇಲಾಖೆಯ ಆಯುಕ್ತರಾದ ಪಿ.ಸಿ.ಜಾಫರ್, ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 45 ಮಂದಿ ಶಿಕ್ಷಕರಿಗೆ ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.