ಮಡಿಕೇರಿ, ಸೆ. 7 : ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆ ಸಾಕಷ್ಟು ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವದರಿಂದ ಈ ಬಾರಿ ಕೈಲ್ ಮುಹೂರ್ತ ಹಬ್ಬವನ್ನು ಕೊಡವ ಸಮಾಜಗಳ ಒಕ್ಕೂಟ ಹಾಗೂ ಕೊಡವ ಮಕ್ಕಡ ಕೂಟದ ವತಿಯಿಂದ ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿವರ್ಷ ಕೈಲ್ ಮುಹೂರ್ತ ಹಬ್ಬವನ್ನು ಅತ್ಯಂತ ಅರ್ಥಪೂರ್ಣ ಮತ್ತು ಅದ್ಧೂರಿಯಾಗಿ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆ ಸಂಕಷ್ಟಕ್ಕೆ ಸಿಲುಕಿದ್ದು, ಸಾಂಕೇತಿಕವಾಗಿ ಹಬ್ಬವನ್ನು ಆಚರಿಸಲಾಗುವದು ಎಂದು ಹೇಳಿದ್ದಾರೆ. ತಾ.9 ರಂದು ಬೆಳಗ್ಗೆ 10 ಗಂಟೆಗೆ ಬಾಳುಗೋಡುವಿನಲ್ಲಿ ಸಾಂಪ್ರದಾಯಿಕವಾಗಿ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವದು. ನಂತರ ಪ್ರಕೃತಿ ವಿಕೋಪದಿಂದ ಮೃತಪಟ್ಟವರಿಗಾಗಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಗುವದು ಎಂದು ವಾಟೇರಿರ ಶಂಕರಿ ಪೂವಯ್ಯ ತಿಳಿಸಿದ್ದಾರೆ. ಸರಳ ಕಾರ್ಯಕ್ರಮದಲ್ಲಿ ಕೊಡವ ಸಮಾಜಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.