ವೀರಾಜಪೇಟೆ, ಸೆ. 9: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಅಡಿ ಮಾತೃ ವಂದನಾ ಸಪ್ತಾಹ 2018 ರ ಕಾರ್ಯಕ್ರಮವನ್ನು ಇಲ್ಲಿನ ಪಂಜರುಪೇಟೆ ಅಂಗನವಾಡಿಯಲ್ಲಿ ಏರ್ಪಡಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಲ್ಲೇಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕಿ ಕೆ.ಹೆಚ್. ಪ್ರಭಾವತಿ ಮಾತನಾಡಿ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನೀಡಿ ಮೊದಲನೆ ಗರ್ಭಿಣಿಗೆ ಮೂರು ಕಂತುಗಳಲ್ಲಿ 5 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ಫಲಾನುಭವಿಗಳು ತಾಯಿ ಕಾರ್ಡ್, ಆಧಾರ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್‍ನ ಖಾತೆ ಪುಸ್ತಕ, ಮೂರು ಫೋಟೋ, ಗಂಡನ ಆಧಾರ್ ಕಾರ್ಡ್, ಮಗು ಜನನದ ನಂತರ ಮಗುವಿನ ಜನನ ದೃಢೀಕರಣ ಪತ್ರದ ದಾಖಲೆಗಳನ್ನು ಒದಗಿಸಬೇಕು. ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಫಲಾನುಭವಿಗಳು ಇದರ ಸದ್ಭಳಕೆ ಮಾಡಿಕೊಳ್ಳುವಂತೆ ಹೇಳಿದರು. ಅಂಗನವಾಡಿ ಕಾರ್ಯಕರ್ತೆ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.