ಮಡಿಕೇರಿ, ಸೆ. 14: ಅತಿವೃಷ್ಟಿಯಿಂದ ಹಾನಿಗೊಳಗಾದ ಹೆಬ್ಬೆಟ್ಟಗೇರಿ, ದೇವಸ್ತೂರು, ತಂತಿಪಾಲ, ಕಾಲೂರು, ಕುಂದರಕೊಡಿ ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕೇಂದ್ರ ಅಧ್ಯಯನ ತಂಡದ ಪ್ರಮುಖರಾದ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಅಧೀಕ್ಷಕ ಇಂಜಿನಿಯರ್ ಜಿತೇಂದ್ರ ಪಾನ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನುಸ್ವಾಮಿ ಅವರು ಅತಿವೃಷ್ಟಿಯಿಂದ ಹಾನಿಯಾಗಿರುವ ಬೆಳೆ, ಮನೆ, ಅಂಗನವಾಡಿ, ಶಾಲಾ ಕಟ್ಟಡಗಳ ಹಾನಿ ಪ್ರದೇಶಗಳನ್ನು ವೀಕ್ಷಿಸಿದರು. ಹೆಬ್ಬೆಟ್ಟಗೇರಿ ಬಳಿ ಭೂ ಕುಸಿತವಾಗಿರುವದನ್ನು ಪರಿಶೀಲಿಸಿದರು.
ಸಂಸದ ಪ್ರತಾಪ್‍ಸಿಂಹ ಮಾತನಾಡಿ, ಕೇಂದ್ರ ತಂಡ ಈಗಾಗಲೇ ಎರಡು ದಿನಗಳಿಂದ ತೀವ್ರ ಅತಿವೃಷ್ಟಿ ಪ್ರದೇಶಗಳಿಗೆ ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದ್ದು, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಜೊತೆಗೂಡಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕೃತಿ ವಿಕೋಪದಿಂದ ಉಂಟಾಗಿರುವ ನಷ್ಟ ಸಂಬಂಧ ಹೆಚ್ಚಿನ ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗುವದು ಎಂದು ತಿಳಿಸಿದರು.
ಪ್ರಕೃತಿ ವಿಕೋಪದಿಂದ ಅಪಾರ ನಷ್ಟ ಉಂಟಾಗಿದ್ದು, ಈ ಸಂಬಂಧ ಕೇಂದ್ರ ತಂಡಕ್ಕೆ ಇಲ್ಲಿನ ನಷ್ಟದ ಬಗ್ಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ನೀಡುವ ಕೆಲಸ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಕೇಂದ್ರ ತಂಡವು ಜಿಲ್ಲೆಯ ವಿವಿಧ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದೆ ಎಂದರು. ಕೇಂದ್ರ ತಂಡದ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ನಷ್ಟದ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜ, ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ತಹಶೀಲ್ದಾರ್ ಕುಸುಮ, ಇಂಜಿನಿಯರ್‍ಗಳು ಇತರರು ಇದ್ದರು.