ವಿಶೇಷ ಲೇಖನ: ಈಶು
ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬವೆಂದರೆ ಅದು ಗಣೇಶ ಚತುರ್ಥಿ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಶಿವ ಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವರು. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು.
ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವದರಲ್ಲಿ ಆಸಕ್ತಿ ಹೊಂದಿದರೆ, ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯ ಮಾಡುವ ದುರ್ಬುದ್ಧಿಯುಂಟಾಗುತ್ತದೆ.
ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ. ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು.
ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ. ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿನಾಯಕನಾಗಿರುವನು.
ಸ್ವಾತಂತ್ರ್ಯ ಪೂರ್ವದಲ್ಲಿ ಖಾಸಗಿಯಾಗಿ ನಡೆಯುತ್ತಿದ್ದ ಚೌತಿ ಸಂಭ್ರಮಕ್ಕೆ ಅಂದು ದೇಶಪ್ರೇಮಿಗಳಲ್ಲಿ ಸ್ವಾತಂತ್ರ್ಯದ ಕಿಡಿಯನ್ನು ಹೊತ್ತಿಸಲು 1893ರಲ್ಲಿ ಬಾಲಗಂಗಾಧರ್ ತಿಲಕ್ ಅವರು ಮಹಾರಾಷ್ಟ್ರದಲ್ಲಿ ಅದಕ್ಕೊಂದು ನೂತನ ಸ್ವರೂಪ ನೀಡಿದರು. ಬಳಿಕ ಗಣೇಶನ ಹಬ್ಬ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರ ವಹಿಸಿ, ರಾಷ್ಟ್ರೀಯ ಹಬ್ಬವಾಗಿರುವದು.
.