ಮಡಿಕೇರಿ, ಸೆ. 21: ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಕೊಟ್ಟರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ಕೊಡಗು ಬಿಜೆಪಿ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿ.ಟಿ. ವೃತ್ತದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್, ದಂಗೆ ಎಂಬ ಪದ ಬಳಕೆ ಬ್ರಿಟೀಷರ ಕಾಲದಲ್ಲಿ ಹೆಚ್ಚು ಚಾಲ್ತಿಯಲ್ಲಿತ್ತು. ಆದರೆ ರಾಜ್ಯದ ಮುಖ್ಯಮಂತ್ರಿಯಾಗಿ ಸಾಮರಸ್ಯ ಕದಡುವ ರೀತಿಯಲ್ಲಿ ಕುಮಾರಸ್ವಾಮಿಯವರು ದಂಗೆ ಏಳಲು ಕರೆ ನೀಡುತ್ತೇನೆ ಎಂದು ಹೇಳಿಕೆ ನೀಡಿರುವದು ಸರಿಯಲ್ಲ. ಈ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್, ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತಮ ಆಡಳಿತ ನೀಡುವಲ್ಲಿ ವಿಫಲರಾಗಿದ್ದು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿ ಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಬಿಜೆಪಿ ಪದಾಧಿಕಾರಿಗಳಾದ ಮನು ಮುತ್ತಪ್ಪ, ರಾಬಿನ್ ದೇವಯ್ಯ, ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಬಿ.ಕೆ. ಅರುಣ್, ಬಿ.ಕೆ. ಜಗದೀಶ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.