ಕೂಡಿಗೆ, ಅ. 5: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಪಂಚಾಯಿತಿ ಅಧ್ಯಕ್ಷೆ ಭವ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಾಮಗಾರಿ ನಡೆಸಿರುವ ಮತ್ತು ಕಾಮಗಾರಿಗೆ ಖರ್ಚಾಗಿರುವ ಹಣದ ಬಗ್ಗೆ ಗ್ರಾಮವಾರು ವಿವರಗಳನ್ನು ನೀಡುವಂತೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ರಾಜೇಶ್ ಮತ್ತು ಪ್ರಕಾಶ್ ತೀವ್ರವಾಗಿ ಅಗ್ರಹಿಸಿದರು.
ಸಭೆಯಲ್ಲಿ 2017-18ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮತ್ತು 2017-18ನೇ ಸಾಲಿನ ಹಣಕಾಸಿನ ಯೋಜನೆಯ ಕಾಮಗಾರಿಗಳ ಬಗ್ಗೆ ಚರ್ಚೆಗಳು ನಡೆದವು. 2017-18ನೇ ಸಾಲಿನ ವಿದ್ಯುತ್ ಬಿಲ್ ಪಾವತಿ ಖಾತೆಯಲ್ಲಿ ಬಿಡುಗಡೆಯಾದ ಅನುದಾನ ಮತ್ತು ವೆಚ್ಚದ ವಿವರ, 2017-18ನೇ ಸಾಲಿನ ಸಂಪೂರ್ಣ ಸ್ವಚ್ಛತಾ ಆಂದೋಲನ ಯೋಜನೆÀಯಡಿಯಲ್ಲಿ ಬಿಡುಗಡೆಯಾದ ಅನುದಾನದ ಸದ್ಬಳಕೆಯ ಕಾಮಗಾರಿಗಳ ಬಗ್ಗೆ ಹಾಗೂ 2017-18ನೇ ಸಾಲಿನ ಪಂಚಾಯಿತಿ ನಿಧಿ ಅನುದಾನದ ಕಾಮಗಾರಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆದವು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಭವ್ಯ ಮಾತನಾಡಿ, ಈ ಸಾಲಿನಲ್ಲಿ ಮಾಸಿಕ ಮತ್ತು ಗ್ರಾಮ ಸಭೆಯ ತೀರ್ಮಾನದಂತೆ ವಾರ್ಡುವಾರು ಪಂಚಾಯಿತಿ ನಿಧಿ ಮತ್ತು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವದು ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಾತನಾಡಿ, 2017-18ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅನುದಾನದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಾರ್ಡಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ಸಾಲಿನಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು.
ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹದ ಅಧಿಕಾರಿ ಹೇಮಂತ್ಕುಮಾರ್ ಇದ್ದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಾರಾನಾಥ್, ಸರ್ವ ಸದಸ್ಯರು ಇದ್ದರು.