ನಾಪೋಕ್ಲು, ಅ. 22 : ಬೆಳಕಿನ ಹಬ್ಬ ದೀಪಾವಳಿ ಮತ್ತಿತರ ಹಬ್ಬ ಮತ್ತು ಆಚರಣೆ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಪರಿಸರ ಜಾಗೃತಿ ಮೂಡಿಸುವ ದಿಸೆಯಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ
ತಾಲ್ಲೂಕಿನ ಕಾಟಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳು ‘ಪರಿಸರಸ್ನೇಹಿ ದೀಪಾವಳಿ ಆಚರಣೆ’ ಕುರಿತಂತೆ ಪರಿಸರ ಜಾಗೃತಿ ಜಾಥಾ ನಡೆಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಡಿಕೇರಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಸಂಯುಕ್ತಾಶ್ರಯ ದಲ್ಲಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಅಂದೋಲನದಲ್ಲಿ ಎನ್ನೆಸ್ಸೆಸ್ ಶಿಬಿರಾರ್ಥಿಗಳು ಹಾಗೂ ಶಾಲಾ ಮಕ್ಕಳು ಗ್ರಾಮದಲ್ಲಿ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಜಾಥಾ ನಡೆಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
‘ಪರಿಸರ ಸ್ನೇಹಿ ದೀಪಾವಳಿ ಆಚರಣೆ’ ಕುರಿತು ಮಾಹಿತಿ ನೀಡಿದ ರಾಜ್ಯ ವಿಜ್ಞಾನ ಪರಿಷತ್ತಿನ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ನ ಶಿಕ್ಷಕ ಟಿ. ಜಿ. ಪ್ರೇಮಕುಮಾರ್, ಪಟಾಕಿ ಸಿಡಿಸುವದರಿಂದ ಹಣದ ದುಂದು ವೆಚ್ಚದ ಜತೆಗೆ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ, ವಾಯುಮಾಲಿನ್ಯ, ಶಬ್ದ ಮಾಲಿನ್ಯದ ಜತೆಗೆ ಹಾನಿಕಾರಕವಾದ ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಪಟಾಕಿಯನ್ನು ಬಿಟ್ಟು ದೀಪಾವಳಿ ಆಚರಿಸಲು ವಿದ್ಯಾರ್ಥಿಗಳು ಕಂಕಣಬದ್ಧರಾಗಬೇಕಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ವಿ. ಆರ್. ವಿಜಯ್ ಮಾತನಾಡಿ, ನಾವೆಲ್ಲಾ ಮಾಲಿನ್ಯವನ್ನುಂಟು ಮಾಡುವ ಪಟಾಕಿ ತ್ಯಜಿಸುವ ಮೂಲಕ ಪರಿಸರ ಸಂರಕ್ಷಿಸಬೇಕಿದೆ ಎಂದರು. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಎನ್.ವೆಂಕಟನಾಯಕ್, ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಕುರಿತು ತಿಳಿಸಿದರು.
ಎನ್ನೆಸ್ಸೆಸ್ ಅಧಿಕಾರಿ ಬಿ. ಡಿ. ರವೀಶ್, ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪನ್ಯಾಸಕರಾದ ಸಿದ್ದರಾಜು, ಅಮೃತ್ ಹೆಬ್ಬಾಲೆ ಇತರರು ಇದ್ದರು. ಗ್ರಾಮದಲ್ಲಿ ನಡೆದ ಪರಿಸರ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಸಂಬಂಧಿಸಿದ ಘೋಷಣಾ ಫಲಕಗಳನ್ನು ಹಿಡಿದು ‘ಹಣತೆ ಹಚ್ಚೋಣ ಬನ್ನಿ, ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ’ ಎಂಬ ಕುರಿತು ಮನೆ ಮನೆಗೆ ತೆರಳಿ ಜನಜಾಗೃತಿ ಮೂಡಿಸಿದರು.