ಮಡಿಕೇರಿ, ಅ. 24: ಮಹರ್ಷಿ ವಾಲ್ಮೀಕಿ ಆದಿಕವಿ, ಮಹಾಕವಿಯಾಗಿದ್ದು, ಅಖಂಡ ಭಾರತ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ ದರು.

ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಮಹಾಕಾವ್ಯ ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ ಮಾತನಾಡಿ, ಸಂಸ್ಕøತ ಸಾಹಿತ್ಯದ ಮೊದಲ ಕವಿ ವಾಲ್ಮೀಕಿ ‘ಸಾಮಾನ್ಯ ವ್ಯಕ್ತಿ ಅಸಾಮಾನ್ಯವಾಗಿ ಬೆಳೆದ ಮಹರ್ಷಿ ವಾಲ್ಮೀಕಿಯವರು ರಾಷ್ಟ್ರದ ಸಂಸ್ಕøತಿಯ ಪ್ರತೀಕ ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಸಾಧಾರಣ, ಸಾಮಾನ್ಯ ಮನುಷ್ಯ, ಮಹರ್ಷಿ ವಾಲ್ಮೀಕಿಯಾಗಿ ನಾಗರಿಕತೆಯ ಬದಲಾವಣೆಗೆ ಶ್ರಮಿಸಿದರು, ಆ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿಯವರ ಆದರ್ಶ ಗುಣಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಮಲ್ಲಪ್ಪ ಮಾತನಾಡಿ, ಮಾನವಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಅಧ್ಯಯನ ಮಾಡಬೇಕು ಎಂದರು.

ಆಶ್ರಮ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ನಾಲ್ಕು ಮಂದಿ ಶಿಕ್ಷಕರು ಹಾಗೂ ನಿಲಯ ಮೇಲ್ವಿಚಾರಕರು ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಪಂಗಡದ 9 ಮಂದಿ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಹಾಗೆಯೇ ವಿವಿಧ ಆಶ್ರಮ ಶಾಲೆಗಳಲ್ಲಿ ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್‍ಕುಮಾರ್, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮ್‍ಸೇನ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರ ಸ್ವಾಗತಿಸಿದರು, ಸಾರ್ವಜನಿಕ ಶಿಕ್ಷಣ ಇಲಾಖೆಯ ರಮೇಶ್ ನಿರೂಪಿಸಿ ದರು, ವಿಜಯಕುಮಾರ್ ಪ್ರಾರ್ಥಿಸಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ ವಂದಿಸಿದರು.