ಮಡಿಕೇರಿ, ಅ. 25 : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10-ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ತಾ. 26ರ ಮಧ್ಯರಾತ್ರಿ 12 ಗಂಟೆಯಿಂದ ತಾ. 28ರ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ, ಸೋಮವಾರಪೇಟೆ ಮತ್ತು ವೀರಾಜಪೇಟೆ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ಚುನಾವಣೆ ತಾ. 28 ರಂದು ನಡೆಯಲಿದ್ದು, ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣಾ ಸಂದರ್ಭದಲ್ಲಿ ಯಾವದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವದೇ ಅವ್ಯವಹಾರಗಳು ನಡೆಯದಂತೆ ಸುಗಮವಾಗಿ ಚುನಾವಣೆ ನಡೆಸುವ ಸಲುವಾಗಿ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 144 ಮತ್ತು ಭಾರತ ಆಯುಧ ಕಾಯ್ದೆ 1959ರ ಪ್ರಕಾರ ತಾ. 31ರ ವರೆಗೆ ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ಒಯ್ಯುವ ಅಥವಾ ಹಿಡಿದುಕೊಂಡು ಓಡಾಡುವದನ್ನು ನಿಷೇಧಿಸಿ, ಆಯುಧ ರಹದಾರಿ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ತಾ. 26 ರೊಳಗಾಗಿ ಠೇವಣಿ ಮಾಡಲು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ.