ಮಡಿಕೇರಿ, ಅ. 26: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018 ಸಂಬಂಧ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣೆ ತಾ. 28 ರಂದು ನಡೆಯಲಿದ್ದು, ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಚುನಾವಣಾ ಸಂದರ್ಭದಲ್ಲಿ ಯಾವದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 144 ಮತ್ತು ಭಾರತ ಆಯುಧ ಕಾಯ್ದೆ 1959ರ ಪ್ರಕಾರ ತಾ. 31 ರವರೆಗೆ ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ಒಯ್ಯುವ ಅಥವಾ ಹಿಡಿದುಕೊಂಡು ಓಡಾಡುವದನ್ನು ನಿಷೇಧಿಸುತ್ತಾ, ಆಯುಧ ರಹದಾರಿ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಲು ವೀರಾಜಪೇಟೆ ತಾಲೂಕು ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿ ತಿಳಿಸಿದ್ದಾರೆ.