ಮಡಿಕೇರಿ, ಅ. 28: ಜಿಲ್ಲಾಡಳಿತ ವತಿಯಿಂದ ವಿಶಿಷ್ಟ ಮತ್ತು ಅರ್ಥ ಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಕನ್ನಡ ರಾಜ್ಯೋತ್ಸವ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕರೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಡಿನ ಹಬ್ಬವಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಜೊತೆಗೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ರಾಜ್ಯೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರ ವ್ಯವಸ್ಥೆ ಮಾಡುವದು, ಕುಡಿಯುವ ನೀರು ಕಲ್ಪಿಸುವದರ ಜತೆಗೆ, ಸ್ವಚ್ಛತೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವಂತಾಗಬೇಕು.

ಬೆಳಗಿನ ಹಾಗೂ ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಅದೇ ರೀತಿ ಸ್ತಬ್ಧಚಿತ್ರಗಳನ್ನು ಸಹ ವಿಷಯಾ ಧಾರಿತ ಹಾಗೂ ಆಕರ್ಷಣೀಯವಾಗಿ ನಿರ್ಮಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1 ರಂದು ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಂಗಡಿ ವಾಣಿಜ್ಯ ಸಂಕೀರ್ಣಗಳಲ್ಲಿ ಅಲಂಕಾರ ಮಾಡಿ, ಕನ್ನಡ ಧ್ವಜ ಹಾರಿಸಿ ನಾಡಹಬ್ಬಕ್ಕೆ ಮೆರುಗು ತರುವಂತಾಗ ಬೇಕು. ಅದೇ ರೀತಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

ಕಳೆದ ಬಾರಿಯಂತೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಹಲವು ಸಲಹೆ ನೀಡಿದರು.

ಜಿ.ಪಂ. ಸಹಾಯಕ ಕಾರ್ಯದರ್ಶಿ ಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೊ, ಆಹಾರ ಇಲಾಖೆ ಉಪ ನಿರ್ದೇಶಕ ಸದಾಶಿವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ, ಪೌರಾಯುಕ್ತೆ ಎಂ.ಎಲ್. ರಮೇಶ್, ಜಿಲ್ಲಾ ಖಜಾನಾಧಿಕಾರಿ ಸತೀಶ್, ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ, ತಾ.ಪಂ. ಇಒ ಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಲೋಕೋಪಯೋಗಿ ಇಲಾಖೆಯ ಎಇಇ ನಟೇಶ್ ಇತರರು ಇದ್ದರು.