ಮಡಿಕೇರಿ, ಅ. 29: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ಪರಿಶಿಷ್ಟ ಜಾತಿ, ಜನಾಂಗದ ಕುಟುಂಬಗಳು ಕೂಡ ಸಂಕಷ್ಟವನ್ನು ಎದುರಿಸುತ್ತಿದ್ದು, ಜಿಲ್ಲಾಡಳಿತ ಶೀಘ್ರ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಬಿ.ಎಸ್.ಪ್ರಸನ್ನ ಕುಮಾರ್ ಒತ್ತಾಯಿಸಿದ್ದಾರೆ.
ಕೊಡಗು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಜನರ ಬದುಕೇ ಅತಂತ್ರವಾಗಿದ್ದು, ವಿಶೇಷವಾಗಿ ಪರಿಶಿಷ್ಟ ಜಾತಿಯ ಹಲವು ಕುಟುಂಬಗಳು ಅತಂತ್ರವಾಗಿವೆ ಎಂದು ತಿಳಿಸಿದ್ದಾರೆ. ದುರ್ಬಲ ವರ್ಗಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಗಂಭೀರ ಚಿಂತನೆ ನಡೆಸಬೇಕಾಗಿದೆ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ, ತಾಲೂಕು ಕೇಂದ್ರಗಳಾದ ವೀರಾಜಪೇಟೆ ಹಾಗೂ ಸೋಮವಾರಪೇಟೆ ಪಟ್ಟಣದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಉತ್ತರ ದಿಕ್ಕಿನಲ್ಲಿರುವ ಪ್ರದೇಶದಲ್ಲಿ ಕನಿಷ್ಟ 500 ಮನೆಗಳನ್ನು ನಿರ್ಮಿಸುವ ಮೂಲಕ ಪುನರ್ ವಸತಿ ಕಲ್ಪಿಸಬೇಕು ಎಂದು ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.