ಮಡಿಕೇರಿ, ಅ. 29 : ಜನವರಿ ಮೊದಲ ವಾರದಲ್ಲಿ ರಾಜಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಸೀಟು ಮತ್ತು ಗದ್ದುಗೆ ಉದ್ಯಾನವನ ಅಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಫಲಪುಷ್ಟ ಪ್ರದರ್ಶನ ಏರ್ಪಡಿಸುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ರಾಜಸೀಟಿನಲ್ಲಿ ಸಂಗೀತ ಕಾರಂಜಿ ಹಾಗೂ ಪುಟಾಣಿ ರೈಲು ಸ್ಥಗಿತಗೊಂಡಿದ್ದು, ಶೀಘ್ರ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಾಜಸೀಟು ಮತ್ತು ಗದ್ದುಗೆ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ನಿಯೋಜಿಸಿರುವದು, ಶುಚಿತ್ವಕ್ಕೆ ಒತ್ತು ನೀಡುವದು, ಜೊತೆಗೆ ಸಮವಸ್ತ್ರದಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಕ್ರಮಕೈಗೊಳ್ಳವದು. ಹಾಗೆಯೇ ಹೊರ ಭಾಗದಲ್ಲಿ ರಕ್ಷಕರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. (ಮೊದಲ ಪುಟದಿಂದ) ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಉದ್ಯಾನವನ ನಿರ್ಮಿಸಲಾಗಿದೆ. ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು. ಉದ್ಯಾನವನದಲ್ಲಿ ಬೆಳಕಿನ ವ್ಯವಸ್ಥೆ, ಸಿಸಿಟಿವಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ, ಹಿರಿಯ ಸಹಾಯ ನಿರ್ದೇಶಕಿ ದೇವಕ್ಕಿ, ಪೌರಾಯುಕ್ತ ಎಂ.ಎಲ್. ರಮೇಶ್, ಲೋಕೋಪಯೋಗಿ ಇಇ ಇಬ್ರಾಹಿಂ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಗನ್ನಾಥ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ, ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿ ರೇಖಾ ಇತರರು ಹಲವು ಮಾಹಿತಿ ನೀಡಿದರು.