ಮಡಿಕೇರಿ, ಅ. 31: ಯುವ ವಕೀಲರು ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಜ್ಞಾನ ಪಡೆದು ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಾಗ, ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ವತಿಯಿಂದ ನಗರದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ಯಾನಲ್ ವಕೀಲರಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾನೂನಿನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಅರಿವು ಇದ್ದಾಗ ಉತ್ತಮ ಸಮಾಜವನ್ನು ಕಾಣ ಬಹುದಾಗಿದೆ. ಆ ನಿಟ್ಟಿನಲ್ಲಿ ಪ್ಯಾನಲ್ ವಕೀಲರು ಹೆಚ್ಚಿನ ಜ್ಞಾನ ಪಡೆದು ಉತ್ತಮ ಸೇವೆ ಸಲ್ಲಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಅವರು ಸಲಹೆ ಮಾಡಿದರು.

ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾನೂನಿಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದಕ್ಕೆ ಪ್ಯಾನಲ್ ವಕೀಲರು ಕೈಜೋಡಿಸುವಂತಾಗ ಬೇಕು ಎಂದು ಅವರು ಸಲಹೆ ಮಾಡಿದರು.

ಯುವ ವಕೀಲರು ಕಾನೂನು ನೆರವು ಮತ್ತು ಅರಿವು ಬಗ್ಗೆ ಮಾಹಿತಿ ನೀಡುವಂತಾಗಬೇಕು. ಪ್ರತೀ ಜಿಲ್ಲೆಯಿಂದ ಉತ್ತಮ ಒಬ್ಬ ಪ್ಯಾನಲ್ ವಕೀಲರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಪ್ಯಾನಲ್ ವಕೀಲರು ಜನ ಮೆಚ್ಚುಗೆ ಗಳಿಸುವ ನಿಟ್ಟಿನಲ್ಲಿ ವೃತ್ತಿ ಕೌಶಲ್ಯ ಬೆಳೆಸಿಕೊಳ್ಳು ವಂತಾಗಬೇಕು ಎಂದು ಅವರು ತಿಳಿಸಿದರು. ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್ ಮಾತನಾಡಿ, ಪ್ಯಾನಲ್ ವಕೀಲರು ಉತ್ತಮ ಸೇವೆ ಸಲ್ಲಿಸಿ ಹೆಸರು ಗಳಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಕಾನೂನು ಸೇವಾ ಪ್ರಾಧಿಕಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಸಿಕ ವರದಿಯನ್ನು ತಪ್ಪದೇ ನೀಡುವಂತಾಗಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ ಯಾವ ಯಾವ ರೀತಿಯ ಪ್ರಕರಣಗಳನ್ನು ಪಡೆಯಲಾಗಿದೆ, ಪ್ರಕರಣ ಯಾವ ಹಂತದಲ್ಲಿದೆ ಹಾಗೆಯೇ ಇತ್ಯರ್ಥ ಪಡಿಸಲಾಗಿದೆ ಎಂಬ ಬಗ್ಗೆ ಪ್ರತಿನಿತ್ಯ ಮಾಹಿತಿ ನೀಡುವಂತಾಗಬೇಕು ಎಂದು ಡಿ. ಪವನೇಶ್ ತಿಳಿಸಿದರು.

ಪ್ರತಿಯೊಂದು ಕ್ಷೇತ್ರದಲ್ಲಿಯೂ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಇದ್ದು, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಬೇಕು. ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ಯಾನಲ್ ವಕೀಲರಿಗೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಅವರು ಹೇಳಿದರು.

ಪ್ಯಾನಲ್ ವಕೀಲರು ಸೇವಾ ಮನೋಭಾವದಿಂದ ದುಡಿಯಬೇಕು. ಆತ್ಮವಿಶ್ವಾಸದಿಂದ ಕಾರ್ಯ ನಿರ್ವಹಿಸಬೇಕು ಎಂದು ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಮಾತನಾಡಿ, ಯುವ ವಕೀಲರು ಕೆಲಸದ ಬಗ್ಗೆ ವಕೀಲಿ ವೃತ್ತಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳು ವಂತಾಗಬೇಕು. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಹರಿಸಲು ಮುಂದಾಗಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಯಾಗಲಿದೆ ಎಂದು ಅವರು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಹಿರಿಯ ಸಿವಿಲ್ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಬಿ.ಕೆ. ಮನು, ಸರ್ಕಾರಿ ಅಭಿಯೋಜಕಿ ಕೃಷ್ಣವೇಣಿ, ವಕೀಲ ಎಂ.ಎ. ನಿರಂಜನ್ ಇತರರು ಇದ್ದರು. ವಕೀಲರ ಸಂಘದ ಉಪಾಧ್ಯಕ್ಷ ಪ್ರೀತಂ ಅವರು ಸ್ವಾಗತಿಸಿದರು, ಅನುಪಮ ಪ್ರಾರ್ಥಿಸಿದರು, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ವಂದಿಸಿದರು.