ಮಡಿಕೇರಿ, ನ. 2: ದೀಪಾವಳಿ ಹಬ್ಬ ಮತ್ತಿತರ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ಪರಿಸರ ಜಾಗೃತಿ ಮೂಡಿಸುವ ದಿಸೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ತಾ. 3 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಮಡಿಕೇರಿ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ‘ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ’ ಕುರಿತಂತೆ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9.30 ಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹಣತೆ (ಮಣ್ಣಿನ ದೀಪ) ಬೆಳಗಿಸುವ ಮೂಲಕ ‘ಹಸಿರು ದೀಪಾವಳಿ ಆಚರಣೆ’ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಲಿದ್ದು, ಸಂತ ಮೈಕಲರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ನವೀನ್ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪೊಲೀಸ್ ಉನ್ನತಾಧಿಕಾರಿ ಡಾ. ಡಿ.ಪಿ. ಸುಮನ್ ಅವರು ‘ಹಸಿರು ದೀಪಾವಳಿ ಆಚರಣೆ’ ಕುರಿತ ಕರಪತ್ರ ಬಿಡುಗಡೆಗೊಳಿಸಲಿದ್ದಾರೆ ಎಂದು ಜಿಲ್ಲಾ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್. ಮಂಜುನಾಥ್, ಡಿಡಿಪಿಐ ಪಿ.ಎಸ್. ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯಿತ್ರಿ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ನ ಅಧ್ಯಕ್ಷ ಜಿ.ಆರ್. ರವಿಶಂಕರ್, ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಉಪಾಧ್ಯಕ್ಷ ಎಂ.ಇ. ಮೊಹಿದ್ದೀನ್, ವಿಜ್ಞಾನ ಪರಿಷತ್ತಿನ ಸದಸ್ಯರು, ರೋಟರಿ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ತಾ. 5 ರಂದು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ‘ಪರಿಸರ ಸ್ನೇಹಿ ದೀಪಾವಳಿ’ ಆಚರಣೆ ಕುರಿತಂತೆ ಪರಿಸರ ಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ.