ಸೋಮವಾರಪೇಟೆ, ನ. 1: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವದರಿಂದ ಅವರ ಶೈಕ್ಷಣಿಕ ಬೆಳವಣಿಗೆಗೆ ಉತ್ತೇಜನ ಕೊಟ್ಟಂತಾಗುತ್ತದೆ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅಖಿಲ ಭಾರತ ವೀರಶೈವ ಮಹಾ ಸಭಾದ ಜಿಲ್ಲಾ ಘಟಕದ ವತಿಯಿಂದ ಕೊಡ್ಲಿಪೇಟೆ ಮಠದ ಶಾಲೆಯ ಆವರಣದಲ್ಲಿರುವ ಭದ್ರಮ್ಮ ಶಾಂತಪ್ಪ ಮಂದಿರದಲ್ಲಿ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಬೇಕು. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯತ್ತಲೂ ಆಸಕ್ತಿ ಬೆಳೆಸಿ ಕೊಳ್ಳಬೇಕು ಎಂದರು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಮಹಾಸಭಾ ದಿಂದ ಪ್ರತಿ ವರ್ಷ ಎಸ್.ಎಸ್. ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವದು ಶ್ಲಾಘನೀಯವೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಹಾಲಪ್ಪ ವಹಿಸಿದ್ದರು. ವೇದಿಕೆಯಲ್ಲಿ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಶಿಡಿಗಳಲೆ ಮಠಾಧೀಶರಾದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಮಹಾ ಸಭಾದ ಉಪಾಧ್ಯಕ್ಷರುಗಳಾದ ಸಾವಿತ್ರಮ್ಮ ನೀಲಕಂಠಪ್ಪ, ಎಸ್.ಎಸ್. ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜ್, ವೀರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ಸಂದೀಪ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಶೇ. 90 ಕ್ಕಿಂತ ಹೆಚ್ಚಿನ ಅಂಕಗಳಿಸಿ ರಾಜ್ಯ ವೀರಶೈವ ಮಹಾ ಸಭಾದ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲೆಯ 12 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.