ಮಡಿಕೇರಿ, ನ.3 :ಟಿಪ್ಪು ಜಯಂತಿ ಸಂದರ್ಭ ನಡೆದ ಗಲಭೆಯಲ್ಲಿ ಮೃತಪಟ್ಟ ಕುಟ್ಟಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದು ಗೊಳಿಸುವದಾಗಿ ಭರವಸೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ವಚನ ಭ್ರಷ್ಟರಾಗದೆ ಕೊಟ್ಟ ಭರವಸೆಯಂತೆ ಟಿಪ್ಪು ಜಯಂತಿಯನ್ನು ರದ್ದುಪಡಿಸಲಿ ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಅಭಿಮನ್ಯು ಕುಮಾರ್, ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿ ತಾ. 10 ರಂದು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಮುಂದಾದರೆ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತೀವ್ರ ವಿರೋಧ ವ್ಯಕ್ತಪಡಿಸಬೇಕಾಗುತ್ತದೆ ಎಂದು ಎಚ್ಚÀರಿಕೆ ನೀಡಿದರು.
ಈ ಹಿಂದೆ ಟಿಪ್ಪು ಜಯಂತಿ ಸಂದರ್ಭ ನಡೆದ ಗಲಭೆಯಿಂದ ಬೇಸರಗೊಂಡಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿದ್ದ ಕುಮಾರ ಸ್ವಾಮಿಯವರು, ಟಿಪ್ಪು ಜಯಂತಿ ಆಚರಣೆಗೆ ಯಾರಿಂದಲೂ ಬೇಡಿಕೆ ಇಲ್ಲದಿದ್ದರು ಅಂದಿನ ಸರಕಾರ ಜಯಂತಿ ಆಚರಿಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಮೃತ ಕುಟ್ಟಪ್ಪ ಅವರ ಮನೆಗೆ ಭೇಟಿ ನೀಡಿದ್ದ ಕುಮಾರಸ್ವಾಮಿಯವರು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದುಗೊಳಿಸುವದಾಗಿ ಭರವಸೆ ನೀಡಿದ್ದರು. ಇದೀಗ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ತಾವು ಅಂದು ನೀಡಿದ ವಚನಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕೆಂದು ಅಭಿಮನ್ಯು ಕುಮಾರ್ ಒತ್ತಾಯಿಸಿದರು.
ಕೊಡಗು ಜಿಲ್ಲೆ ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಇನ್ನೂ ಕೂಡ ನೋವಿನ ವಾತಾವರಣ ಮರೆಯಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಮತ್ತೆ ಟಿಪ್ಪು ಜಯಂತಿಯ ಹೆಸರಿನಲ್ಲಿ ಸಂಘರ್ಷದ ವಾತಾವರಣ ಮೂಡಿಸುವದು ಬೇಡವೆಂದು ಅಭಿಮನ್ಯು ಕುಮಾರ್ ತಿಳಿಸಿದರು.
ಕೊಡಗು ಜಿಲ್ಲೆಯ ಮಟ್ಟಿಗೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವದಾಗಿ ಅಭಿಮನ್ಯುಕುಮಾರ್ ತಿಳಿಸಿದರು.
ಸಮಿತಿಯ ಪ್ರಮುಖ ಹಾಗೂ ಜಿ.ಪಂ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾವು ನೀಡಿದ ಭರವಸೆಯನ್ನು ಮರೆತು ರಾಜಕೀಯ ಒತ್ತಡಕ್ಕೆ ಮಣಿದು, ಜಯಂತಿ ಆಚರಣೆಗೆ ಮುಂದಾದರೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಒಗ್ಗೂಡಿ ತೀವ್ರ ರೀತಿಯಲ್ಲಿ ಪ್ರತಿಭಟನೆ ವ್ಯಕ್ತ ಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕೊಡಗಿನ ಜನರ ಭಾವನೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತಂದರೆ ಅದನ್ನು ಸಹಿಸಲು ಸಾಧ್ಯವಿಲ್ಲವೆಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ನ ಕಾರ್ಯದರ್ಶಿ ಡಿ.ನರಸಿಂಹ, ಬಜರಂಗದಳದ ಜಿಲ್ಲಾ ಸಂಚಾಲಕ ಚೇತನ್ ಹಾಗೂ ಸುಬ್ಬಯ್ಯ ಉಪಸ್ಥಿತರಿದ್ದರು.