ಮಡಿಕೇರಿ, ನ. 29: ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವದರ ಜೊತೆಗೆ ಆಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ತಿಳಿಸಿದ್ದಾರೆ. ನಗರದ ಹೊಟೇಲ್ ಮಯೂರ ವ್ಯಾಲಿವ್ಯೂನಲ್ಲಿ ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನಾ ಕಾರ್ಯಕ್ರಮಗಳು ಹಾಗೂ ‘ಕಾಯಕಲ್ಪ’ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಪ್ರಾಥಮಿಕ, ಸಮುದಾಯ, ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವಾ ಸೌಲಭ್ಯಗಳನ್ನು ಕಲ್ಪಿಸಬೇಕು. ಆಸ್ಪತ್ರೆಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡಿ ಉತ್ತಮ ಸೇವೆ ಕಲ್ಪಿಸುವದು ಮತ್ತಿತರ ಸಂಬಂಧ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಕಾಯಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ. ರಾಜೇಶ್ ತಿಳಿಸಿದರು. ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರತೀ ಬಿಪಿಎಲ್ ಕುಟುಂಬದ ಸದಸ್ಯರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಹಾಗೆಯೇ ಎಪಿಎಲ್ ಕುಟುಂಬಗಳಿಗೆ 1.5 ಲಕ್ಷ ರೂ.ವರೆಗೆ ಉಚಿತ ಆರೋಗ್ಯ ಸೇವೆ ದೊರೆಯಲಿದೆ ಎಂದರು. ಪ್ರತೀ ಕುಟುಂಬದ ಸದಸ್ಯರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಗುರುತಿನ ಚೀಟಿ ಇಲ್ಲದಿದ್ದರೂ ಆರೋಗ್ಯ ಸೇವೆ ದೊರೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಅವರು ಆಸ್ಪತ್ರೆಗಳಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಬೇಕು. ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

ವೈದ್ಯರು ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದಾಗ ಜನ ಮೆಚ್ಚುಗೆಗೆ ಪಾತ್ರರಾಗಬಹುದಾಗಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಆರ್‍ಸಿಹೆಚ್ ಅಧಿಕಾರಿ ಡಾ. ನಿಲೇಶ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಎಂ. ಶಿವಕುಮಾರ್, ವೈದ್ಯಕೀಯ ಕಾಲೇಜಿನ ಡಾ. ನರಸಿಂಹ, ಡಾ. ಶಿವರಾಜ್, ಡಾ. ಚೇತನ್, ಡಾ. ಸುಪರ್ಣ ಇತರರು ಇದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.