ಮಡಿಕೇರಿ, ಡಿ. 1: ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಚ್.ಐ.ವಿ. ಏಡ್ಸ್‍ನಿಂದ ದೂರವಿರಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಸಲಹೆ ಮಾಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸೊಸೈಟಿ, ಮಡಿಕೇರಿ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಓಡಿಪಿ-ಸ್ನೇಹಾಶ್ರಯ ಸಮಿತಿ ಹಾಗೂ ಸರ್ವೋದಯ ಎಚ್‍ಐವಿ ಬಾಧಿತರ ಸಂಪರ್ಕಜಾಲ, ಆಶೋದಯ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಏಡ್ಸ್ ಜಾಗೃತಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಚ್.ಐ.ವಿ. ಏಡ್ಸ್ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮತ್ತು ಮುನ್ನೆಚ್ಚರಿಕೆ ಅಗತ್ಯ ಎಂದು ಲೋಕೇಶ್ವರಿ ಗೋಪಾಲ್ ತಿಳಿಸಿದರು. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ ಎಚ್.ಐ.ವಿ. ಏಡ್ಸ್‍ನಿಂದ ದೂರವಿರಬೇಕು. ಈ ಬಗ್ಗೆ ಉದಾಸೀನ ತೋರಬಾರದು.

ಎಚ್.ಐ.ವಿ. ಏಡ್ಸ್ ರೋಗ ಬರದಂತೆ ನೋಡಿಕೊಳ್ಳಬೇಕು. ಏಡ್ಸ್ ಬಂದ ನಂತರ ಜೀವನ ಮುಗಿಯಿತು ಎಂದು ಭಾವಿಸಬಾರದು. ಅವರಿಗೂ ಸಹ ಮಾನಸಿಕ ಧೈರ್ಯ ತುಂಬಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಮಾತನಾಡಿ ಪ್ರಸಕ್ತ ವರ್ಷದ ಘೋಷಣೆಯು ‘ಪ್ರತಿಯೊಬ್ಬರೂ ಎಚ್.ಐ.ವಿ. ಸ್ಥಿತಿಯನ್ನು ತಿಳಿದುಕೊಳ್ಳಿ’ ಎಂಬದಾಗಿದೆ ಎಂದು ಅವರು ಹೇಳಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಎಚ್.ಐ.ವಿ. ಏಡ್ಸ್ ಬಗ್ಗೆ ಜಾಗೃತಿ ಇರಬೇಕು ಎಂದರು. ಓಡಿಪಿ-ಸ್ನೇಹಾಶ್ರಯ ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ ಸ್ನೇಹಾಶ್ರಯ ಸಮಿತಿಯಲ್ಲಿ 32 ಮಕ್ಕಳಿಗೆ ಆಶ್ರಯ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಪ್ರವೀಣ್ ಎಚ್.ಐ. ವಿ.ಏಡ್ಸ್ ತಡೆಗಟ್ಟುವ ಬಗ್ಗೆ ಪ್ರತಿಜ್ಞಾ ವಿಧಿ ಭೋದಿಸಿದರು. ವೈದ್ಯಕೀಯ ಕಾಲೇಜಿನ ಉಪನ್ಯಾಸಕ ಡಾ. ಮಹೇಶ್ ಎಚ್.ಐ.ವಿ.ಏಡ್ಸ್ ಕುರಿತು ಉಪನ್ಯಾಸ ನೀಡಿದರು. ಓಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರವಿಶಂಕರ್ ಅವರನ್ನು ಸನ್ಮಾನಿಸಲಾಯಿತು.

ಲಯನ್ ಕ್ಲಬ್ ಅಧ್ಯಕ್ಷ ಕೆ.ಕೆ. ದಾಮೋದರ ಇದ್ದರು. ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎ.ಸಿ.ಶಿವಕುಮಾರ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಇತರರು ಇದ್ದರು.

ಜಾಥಾಗೆ ಚಾಲನೆ: ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಜಾಥಾಗೆ ಚಾಲನೆ ನೀಡಿದರು. ಜಾಥಾದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಭಾಗವಹಿಸಿದ್ದರು.