ಮಡಿಕೇರಿ, ಡಿ. 3: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ತಾ.5ರಂದು (ನಾಳೆ) ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್ ಅಂದು ಪೂರ್ವಾಹ್ನ 9.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ, ಸಾಧಕರಿಗೆ ಸನ್ಮಾನ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಫಲಿತಾಂಶ ಉತ್ತಮಗೊಳಿಸುವ ಬಗ್ಗೆ, ಮಕ್ಕಳ ಹಕ್ಕುಗಳ ಬಗ್ಗೆ ಕಾರ್ಯಾಗಾರ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಶೇ.100 ಫಲಿತಾಂಶ ಪಡೆದ ಶಾಲೆಗಳ ಮುಖ್ಯಸ್ಥರನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸನ್ಮಾನಿಸಲಿದ್ದು, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಸಾಧಕರನ್ನು ಸನ್ಮಾನಿಸಲಿದ್ದಾರೆ ಎಂದು ವಿವರಿಸಿದರು.

ಕೊಡಗು ಮೈಸೂರು ಕ್ಷೇತ್ರದ ಸಂಸದ ಪ್ರತಾಪ್‍ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್ ಸಂಘಟನೆಯ ರಾಜ್ಯಾಧ್ಯಕ್ಷ ಹೆಚ್.ಕೆ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ಪೂಜಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಎನ್. ಪ್ರಭಾ ಅವರು ಮಕ್ಕಳ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘವು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಲವಾರು ಹೋರಾಟಗಳ ಮೂಲಕ ಸರಕಾರದ ಗಮನಸೆಳೆಯುತ್ತಾ ಬಂದಿದ್ದು, ಹೋರಾಟದ ಫಲವಾಗಿ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇನ್ನೂ ಹಲವು ಸಮಸ್ಯೆಗಳಿದ್ದು, ಈ ಬಗ್ಗೆ ಸಮಾವೇಶದ ಮೂಲಕ ಸರಕಾರದ ಗಮನ ಸೆಳೆಯಲಾಗುವದು. ಅದರಲ್ಲೂ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಮಡಿಕೇರಿಗೆ ಮಾತ್ರ ನೀಡಲಾಗುತ್ತಿರುವ ಗಿರಿಭತ್ಯೆಯನ್ನು ಜಿಲ್ಲೆಯ ಎಲ್ಲಾ ನೌಕರರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದ್ದು, ಈ ಬಗ್ಗೆ ಮತ್ತೆ ಗಮನಸೆಳೆಯಲಾಗುವದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಖಜಾಂಚಿ ಕೆ.ಎನ್.ದಿನೇಶ್ ಹಾಗೂ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್ ಉಪಸ್ಥಿತರಿದ್ದರು.