ಗೋಣಿಕೊಪ್ಪ ವರದಿ ಡಿ. 2: ತಿತಿಮತಿ ಗ್ರಾಮ ಪಂಚಾಯಿತಿ ವತಿಯಿಂದ ಅಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಸರ್ಕಾರಿ ಶಾಲೆಗಳಿಗೆ ಲಭಿಸುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ಮಾಹಿತಿ ಕಲೆಹಾಕಿದರು.

ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಸುಂದರ್ ಅಧ್ಯಕ್ಷತೆಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯಗಳು ದೊರೆಯುವ ವಿಧಾನ ಹಾಗೂ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಾಲ್ಯ ವಿವಾಹ, ರಸ್ತೆ ಸುರಕ್ಷತೆ, ಪೌಷ್ಟಿಕ ಆಹಾರ ಸೇವನೆ, ಆರೋಗ್ಯ ಕಾಪಾಡಿಕೊಳ್ಳುವ ವಿಧಾನ ಹಾಗೂ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಾಲಾ ವ್ಯಾಪ್ತಿಗೆ ಬೇಕಾದ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ವಿದ್ಯಾರ್ಥಿಗಳು ವೇದಿಕೆಯಲ್ಲಿ ಕೂತು ಸಮಸ್ಯೆ ಹೇಳಿಕೊಂಡರು.

ಪೊಲೀಸ್ ಸಹಾಯಕ ಉಪನಿರೀಕ್ಷಕ ಹೊಂಬಾಳಯ್ಯ, ಆರೋಗ್ಯ ಇಲಾಖೆ ಬಿಹೆಚ್‍ಇಒ ಶಿವಯ್ಯ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರುಗಳು ಮಾಹಿತಿ ನೀಡಿದರು.

ಈ ಸಂದರ್ಭ ತಿತಿಮತಿ ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್, ಪಿಡಿಓ ಮಮತಾ ಉಪಸ್ಥಿತರಿದ್ದರು.