ಸೋಮವಾರಪೇಟೆ, ಡಿ. 4: ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘ, ಒಕ್ಕಲಿಗರ ಯುವವೇದಿಕೆ, ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ, ನಗರ ಗೌಡ ಸಂಘದ ವತಿಯಿಂದ ತಾ. 10 ರಂದು ಸ್ಥಳೀಯ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕೃತಿ ವಿಕೋಪದಿಂದ ಜಿಲ್ಲೆಯ ಜನರು ತೀವ್ರ ಸಂಕಷ್ಟಕ್ಕೊಳಗಾಗಿರುವದರಿಂದ, ಇಲ್ಲಿನ ಜನರಿಗೆ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ, ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ವಿಶೇಷ ಕಾಳಜಿ ಯಿಂದ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಹೃದ್ರೋಗ, ನರರೋಗ, ಮೂತ್ರಪಿಂಡ, ಮಧುಮೇಹ, ಪಿತ್ತ ಜನಕಾಂಗ, ಕ್ಯಾನ್ಸರ್, ವೈದ್ಯಕೀಯ, ಶಸ್ತ್ರಚಿಕಿತ್ಸಾ, ಗರ್ಭಿಣಿ ಮತ್ತು ಸ್ತ್ರೀರೋಗ, ಕೀಲು ಮೂಳೆ, ದಂತವೈದ್ಯ, ಕಿವಿ,ಮೂಗು, ಗಂಟಲು, ಮಕ್ಕಳ ತಜ್ಞರು, ನೇತ್ರ, ಚರ್ಮ, ಮಾನಸಿಕ ರೋಗ ಸೇರಿದಂತೆ ಇನ್ನಿತರ ರೋಗಗಳ ತಜ್ಞರುಗಳು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಶಿಬಿರದಲ್ಲಿ ಸ್ಕ್ಯಾನಿಂಗ್, ಇ.ಸಿ.ಜಿ., ರಕ್ತ ಮತ್ತು ಮೂತ್ರ ಪರೀಕ್ಷೆ, ವೈದ್ಯಕೀಯ ತಪಾಸಣೆಯೊಂದಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತದೆ ಎಂದು ಯುವ ವೇದಿಕೆ ಅಧ್ಯಕ್ಷ ಬಿ.ಜೆ. ದೀಪಕ್ ಹೇಳಿದರು.

ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅವಶ್ಯಕತೆಯಿರುವ ರೋಗಿಗಳಿಗೆ ಸ್ಥಳದಲ್ಲೇ ಗುರುತಿನ ಚೀಟಿ ನೀಡಲಾಗುತ್ತದೆ. ಅಂತಹವರಿಗೆ ಸಂಸ್ಥೆಯ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗಲಿದೆ.

ಕಣ್ಣಿನ ಶಸ್ತ್ರಚಿಕಿತ್ಸೆ, ಮಸೂರ ಮತ್ತು ಕನ್ನಡಕಗಳನ್ನು ಉಚಿತವಾಗಿಯೇ ನೀಡಲಾಗುತ್ತದೆ. ಆಸ್ಪತ್ರೆಯ ಜನರಲ್ ವಾರ್ಡ್‍ಗಳಲ್ಲಿ ವೈದ್ಯಕೀಯ ಸೌಲಭ್ಯದೊಂದಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

ಶಿಬಿರವನ್ನು ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದು, ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ. ಎಂ.ಜಿ. ಶಿವರಾಮು, ವೈದ್ಯಾಧೀಕ್ಷಕ ಡಾ. ಟಿ.ಎಂ. ಮನೋಹರ್ ಭಾಗವಹಿಸಲಿದ್ದಾರೆ.

ಗೋಷ್ಠಿಯಲ್ಲಿ ಮಹಿಳಾ ವೇದಿಕೆಯ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಪ್ರಮುಖರಾದ ಪ್ರಕಾಶ್, ಜಗದೀಶ್ ಉಪಸ್ಥಿತರಿದ್ದರು.