ಕುಶಾಲನಗರ, ಡಿ. 5: ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪೂರಕವಾದ ವಾತಾವರಣ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶಿಕ್ಷಕರ ಸಮಸ್ಯೆಗಳ ಈಡೇರಿಕೆಗೆ ಮುಂದಾಗುವದು ಅತ್ಯಗತ್ಯ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೆಗೌಡ ಹೇಳಿದರು.ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಸ್ಥಳೀಯ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮ ಪಡಿಸುವ ಕುರಿತಾದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕ ವರ್ಗದವರು ಹಲವು ಸಮಸ್ಯೆಗಳಿಂದ ನಲುಗುತ್ತಿದ್ದಾರೆ. ಹೋರಾಟದ ಮೂಲಕ ತಮ್ಮ ಬೇಡಿಕೆಗಳ ಈಡೇರಿಸಿ ಕೊಳ್ಳುವ ಪರಿಸ್ಥಿತಿ ನಿರ್ಮಾಣ ಗೊಂಡಿರುವದು ವಿಪರ್ಯಾಸದ ಸಂಗತಿ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಅವರ ಧ್ವನಿಯಾಗಿ ನಾನು ಕೂಡ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ. ಮಂಜುನಾಥ್ ಮಾತನಾಡಿ, ಪ್ರೌಢಶಾಲಾ

(ಮೊದಲ ಪುಟದಿಂದ) ಹಂತದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕೆ ಸರಕಾರ ಹಲವು ರೀತಿಯ ಯೋಜನೆಗಳನ್ನು ಹಮ್ಮಿಕೊಂಡಿರುವದು ಶ್ಲಾಘನೀಯ ವಿಚಾರವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಜಿಲ್ಲೆಯ ಪ್ರಕೃತಿ ವಿಕೋಪ ಘಟನೆಗೆ ಸ್ಪಂದಿಸಿ ಜಿಲ್ಲಾ ಘಟಕ ರಾಜ್ಯ ಘಟಕದೊಂದಿಗೆ ಕೈಜೋಡಿಸಿ ಶಿಕ್ಷಕರ ಒಂದು ದಿನದ ವೇತನವನ್ನು ಸಂತ್ರಸ್ತರಿಗೆ ನೀಡುವ ನಿರ್ಣಯದಂತೆ ಜಿಲ್ಲೆಗೆ ಮುಖ್ಯಮಂತ್ರಿಗಳು ಭೇಟಿ ನೀಡುವ ಸಂಬಂಧ ಸಂಗ್ರಹ ಮೊತ್ತದ ಚೆಕ್ ಹಸ್ತಾಂತರಿಸಲಾಗುವದು ಎಂದರು.

ಕಾರ್ಯಕ್ರಮದಲ್ಲಿ ಸಹಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಮಕ್ಕಳ ಹಕ್ಕುಗಳ ಬಗ್ಗೆ ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮಪಡಿಸುವ ಬಗ್ಗೆ ಸಂಪನ್ಮೂಲ ವ್ಯಕ್ತಿ ಎನ್.ಪ್ರಭಾ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಎಂ. ರಂಗಸ್ವಾಮಿ, ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರುಗಳಾದ ಪಿ.ಎಸ್. ಮಚ್ಚಡೋ, ವಾಲ್ಟರ್ ಡಿ ಮೆಲ್ಲೋ, ಕೊಡಗು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ರವಿ, ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್ ವಾಸ್, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ನಾಗರಾಜಯ್ಯ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಗಾಯತ್ರಿ, ಕೊಡಗು ಜಿಲ್ಲಾ ವೃತ್ತ ಶಿಕ್ಷಕರ ಸಂಘದ ಅಧ್ಯಕ್ಷ ಜಿಮ್ಮಿ ಸಿಕ್ವೇರಾ, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ಮತ್ತಿತರರು ಇದ್ದರು.

ಸಂಘಟದ ಜಿಲ್ಲಾ ಕಾರ್ಯದರ್ಶಿ ಹೆಚ್.ಜಿ.ಕುಮಾರ್ ಸ್ವಾಗತಿಸಿದರು, ಸಂಘಟನಾ ಕಾರ್ಯದರ್ಶಿ ದಯಾನಂದ್ ವಂದಿಸಿದರು.