ಕುಶಾಲನಗರ, ಡಿ. 14: ನದಿ ತಟಗಳಲ್ಲಿ ಯಾವದೇ ರೀತಿಯ ಕೈಗಾರಿಕೆ ಅಥವಾ ಪ್ರವಾಸೋದ್ಯಮ ಅಥವಾ ವಾಣಿಜ್ಯ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಳೀಯ ಆಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನದಿ ಮತ್ತು ನದಿ ಪಾತ್ರಗಳನ್ನು ಸಂರಕ್ಷಿಸುವ ದೃಷ್ಟಿಯಿಂದ ಮಂಡಳಿ 2015ರಲ್ಲಿ ಹೊರಡಿಸಿದ ಸುತ್ತೋಲೆಯಂತೆ ರಾಜ್ಯದಲ್ಲಿರುವ ಎಲ್ಲಾ ನದಿಗಳ ಎರಡೂ ಬದಿಗಳಲ್ಲಿ ಗರಿಷ್ಠ ಪ್ರವಾಹ ಮಟ್ಟದಿಂದ 500 ಮೀ ಅಂತರದಲ್ಲಿ ಕೃಷಿ ಮತ್ತು ತೋಟಗಾರಿಕೆ ಸಂಬಂಧಿತ ಚಟುವಟಿಕೆಗಳನ್ನು ಹೊರತುಪಡಿಸಿ ಅಭಿವೃದ್ಧಿ ಕಾರ್ಯಗಳಾದ ವಸತಿ, ವಾಣಿಜ್ಯ, ಕೈಗಾರಿಕೆ ಮುಂತಾದ ಚಟುವಟಿಕೆಗಳಿಗೆ ಅನುಮತಿ ನೀಡಬಾರದೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಜೀವನದಿ ಕಾವೇರಿ ಸಂರಕ್ಷಣೆ ಹಿನ್ನೆಲೆಯಲ್ಲಿ ಯೋಜನೆಗಳನ್ನು ರೂಪಿಸುವಂತೆ ಕಾವೇರಿ ನದಿ ಸ್ವಚ್ಚತಾ ಆಂದೋಲನ ರಾಜ್ಯ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಬರೆದ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನದಿ ಸಂರಕ್ಷಣೆಗೆ ಸಂಬಂಧಿಸಿದಂತೆ ಪರಿಶೀಲಿಸಿ ಸಂಬಂಧಿಸಿದ ಪ್ರಾದೇಶಿಕ ಕಚೇರಿಗಳಿಂದ ಕೂಲಂಕಷ ವರದಿ ಪಡೆದು ಈ ಕ್ರಮ ಕೈಗೊಂಡಿರುವ ಬಗ್ಗೆ ಲಿಖಿತವಾಗಿ ಆದೇಶ ನೀಡಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.