ಮಡಿಕೇರಿ, ಡಿ. 17: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾನಿಯಲ್ಲಿ ಸಂತ್ರಸ್ತರಾದವರಿಗೆ ಸರಕಾರದಿಂದ ನೀಡಲಾಗಿರುವ ಪರಿಹಾರ ಕಾರ್ಯ, ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲೆಯ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಅವರುಗಳು ಪ್ರಶ್ನೆಗಳ ಮೂಲಕ ಸರಕಾರದ ಗಮನ ಸೆಳೆದಿದ್ದು, ಸಂಬಂಧಿಸಿದ ಇಲಾಖೆಯ ಸಚಿವರುಗಳು ಉತ್ತರ ನೀಡಿದ್ದಾರೆ.
ವಿಧಾನಸಭೆಯಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಅವಕಾಶದಡಿ ಕೆ.ಜಿ. ಬೋಪಯ್ಯ ಅವರು, ಕೊಡಗು ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಲು ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಮಂದಿಗೆ ಪರಿಹಾರ ಒದಗಿಸಲಾಗಿದೆ, ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದ ಹಣವೆಷ್ಟು, ಈವರೆಗೆ ಕೈಗೊಂಡ ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದ್ದರು. ಇಂದು ಉತ್ತರ ನೀಡಿರುವ ಕಂದಾಯ ಇಲಾಖಾ ಸಚಿವ ಆರ್.ವಿ. ದೇಶಪಾಂಡೆ ಅವರು, ಪರಿಹಾರಕ್ಕಾಗಿ ರೂ.722.06 ಕೋಟಿ ಪರಿಹಾರ ಕೋರಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರದಿಂದ ರೂ. 546.21 ಕೋಟಿ ಅನುದಾನ ನೀಡಿದ್ದು, ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಜಮಾ ಮಾಡಲಾಗುವದು. ಮೂಲಭೂತ ಸೌಕರ್ಯಗಳ ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಉತ್ತರ ನೀಡಿದ್ದಾರೆ.
ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಇಲಾಖೆ ಯಿಂದ ವಿಶೇಷ ಅನುದಾನ ಒದಗಿಸಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆಯೆ, ಎಷ್ಟು ಅನುದಾನ ನೀಡಲಾಗಿದೆ ಎಂದು ಪ್ರಶ್ನೆ ಕೇಳಿದ್ದರು. ಉತ್ತರಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸಂತ್ರಸ್ತರಾದ ಮಡಿವಾಳ, ಸವಿತಾ, ಕುಂಬಾರ ಮುಂತಾದ ಹಿಂದುಳಿದ ವರ್ಗಗಳಿಗೆ ಸೇರಿದ 2000 ಸಂತ್ರಸ್ತರಿಗೆ ವಿವಿಧ ಚಟುವಟಿಕೆ ಕೈಗೊಳ್ಳಲು ರೂ. 10 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಸ್ವಯಂ ಉದ್ಯೋಗ ಕೈಗೊಳ್ಳುವ ಚಟುವಟಿಕೆಯನುಸಾರ ರೂ. 50 ಸಾವಿರದವರೆಗೆ ರೂ. 10 ಸಾವಿರ ಸಹಾಯಧನದೊಂದಿಗೆ ಸಾಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಕೊಡಗಿನ ಮಳೆ ಅನಾಹುತದ ನಂತರ ಪ್ರವಾಸಿಗರನ್ನು ಸೆಳೆಯಲು ಇಲಾಖೆ ವತಿಯಿಂದ ಕೈಗೊಂಡ ಕ್ರಮಗಳ ಬಗ್ಗೆ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ತೋಟಗಾರಿಕಾ ಸಚಿವ ಎಂ.ಸಿ. ಮಸಗೂಳಿ ಅವರು, ಮಳೆ ಅನಾಹುತದಿಂದಾಗಿ ಉದ್ಯಾನ ವನಕ್ಕೆ ಯಾವದೇ ಹಾನಿಯಾಗಿಲ್ಲ. ಉದ್ಯಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.