ಕೂಡಿಗೆ, ಫೆ. 5: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬಸವನತ್ತೂರು ಗ್ರಾಮದ ಆನೆಕೆರೆ ಭಾಗದ ಬೀದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪೈಪ್‍ಲೈನ್ ಕಾಮಗಾರಿಗೆ ಚಾಲನೆ ನೀಡಲಾಯಿತು.
ಕೂಡುಮಂಗಳೂರು ಗ್ರಾ.ಪಂ. ಸದಸ್ಯೆ ಸಾವಿತ್ರಿ ರಾಜನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮದ ಕುಡಿಯುವ ನೀರಿನ ಯೋಜನೆಯ ವ್ಯವಸ್ಥೆಗೆ ಹಾಗೂ ಒಳಚರಂಡಿ ಯೋಜನೆ ಹಾಗೂ ತಡೆಗೋಡೆಗಳ ನಿರ್ಮಾಣಕ್ಕೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಅವಕಾಶವಿದ್ದು, ಗ್ರಾಮಸ್ಥರು, ರೈತರು ಉದ್ಯೋಗ ನೋಂದಣಿ ಚೀಟಿಯನ್ನು ಮಾಡಿಸಿಕೊಳ್ಳುವ ಮೂಲಕ ತಮ್ಮ ಗ್ರಾಮದ ಪ್ರಗತಿಗೆ ಸಹಕರಿಸಬೇಕು. ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಒಂದು ಗ್ರಾಮಕ್ಕೆ ಹತ್ತರಿಂದ ಹದಿನೈದು ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಮಾಡಲು ಅವಕಾಶವಿದ್ದು, ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದರು.
ಕುಡಿಯುವ ನೀರಿನ ಯೋಜನೆಗೆ ಗ್ರಾ.ಪಂ. ಸದಸ್ಯರ ಅನುದಾನದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭ ಬಸವನತ್ತೂರು ಮತ್ತು ಆನೆಕೆರೆ ವ್ಯಾಪ್ತಿಯ ಗ್ರಾಮಸ್ಥರು ಹಾಜರಿದ್ದರು.