ಸೋಮವಾರಪೇಟೆ, ಫೆ. 6: ತಥಾಸ್ತು ಸಾತ್ವಿಕ ಸಂಸ್ಥೆ, ನಯನ ಮಹಿಳಾ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್‍ನ ಸದಸ್ಯರು ಮತ್ತು ವಿದ್ಯಾರ್ಥಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹಣ್ಣು ಹಂಪಲು ವಿತರಿಸಿ ಅಭಿನಂದಿಸಿದರು.

ಶಾಸಕರ ಕಚೇರಿಯಲ್ಲಿ ಸುಮಾರು 30 ಮಂದಿ ರಕ್ತದಾನಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು, ಬಿಸ್ಕತ್‍ಗಳನ್ನು ವಿತರಿಸಿದ ಶಾಸಕರು, ನಂತರ ಮಾತನಾಡಿ, ನಿಯಮಿತ ರಕ್ತದಾನದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ರಕ್ತದಾನಕ್ಕೆ ಯುವ ಜನಾಂಗ ಸ್ವಯಂಪ್ರೇರಣೆಯಿಂದ ಮುಂದೆ ಬರಬೇಕು ಎಂದರು.ಈ ಸಂದರ್ಭ ಕಾಲೇಜು ಪ್ರಾಂಶುಪಾಲ ಶ್ರೀಧರ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ತಾ.ಪಂ. ಸದಸ್ಯೆ ತಂಗಮ್ಮ, ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿಗಳು ಹಾಜರಿದ್ದರು.