ಮಡಿಕೇರಿ, ಫೆ. 6: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕೊಡಗು ಜಿಲ್ಲಾ ಸವಿತಾ ಸಮಾಜದ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ತಾ. 12 ರಂದು ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ನಡೆಯಲಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಾಜದ ಮಡಿಕೇರಿ ತಾಲೂಕು ಕಾರ್ಯದರ್ಶಿ ಕೆ.ಎನ್. ಅವಿನಾಶ್, ಅಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಉದ್ಘಾಟಿಸಲಿದ್ದು, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸರಸ್ವತಿ ಡಿ.ಎಡ್. ಕಾಲೇಜು ಪ್ರಾಂಶುಪಾಲ ಕುಮಾರ್ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಸಮಿತಿ ಪ್ರತಿನಿಧಿ ವೈ. ಪುಟ್ಟರಾಜು ಮಾತನಾಡಿ, ಅಂದು ಪೂರ್ವಾಹ್ನ 9 ಗಂಟೆಗೆ ಮಡಿಕೇರಿಯ ಕನ್ನಿಕಾ ಪರಮೇಶ್ವರಿ ದೇವಾಲಯದ ಬಳಿಯಿಂದ ಕೋಟೆ ಆವರಣದವರೆಗೆ ಸವಿತಾ ಮಹರ್ಷಿಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಎನ್. ವೆಂಕಟೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಡಿ. ಮಧು, ವೀರಾಜಪೇಟೆ ತಾಲೂಕು ಅಧ್ಯಕ್ಷ ಕೆ. ವೆಂಕಟೇಶ್ ಹಾಗೂ ಸೋಮವಾರಪೇಟೆ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಜಯರಾಂ ಉಪಸ್ಥಿತರಿದ್ದರು.