ಕೂಡಿಗೆ, ಫೆ. 11: ಇಲ್ಲಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಡ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಪ್ರಥಮವಾಗಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಗ್ರಾಮದಲ್ಲಿ ದಿಡ್ಡಳ್ಳಿಯ ನಿರಾಶ್ರಿತರಿಗೆ ನಿರ್ಮಾಣಗೊಳ್ಳುತ್ತಿರುವ 524 ಮನೆಗಳ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವೀಕ್ಷಿಸಿದರು. ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅರ್ಹರಾದ ಎಲ್ಲಾ ಫಲಾನುಭವಿಗಳಿಗೆ ಮನೆ ನೀಡಲು ಸಿದ್ಧರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಾಡಿಯ ಮುಖಂಡರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ನಿಮ್ಮಗಳ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದ್ದು, ಈಗಾಗಲೇ ನಿಮಗಾಗಿ ನಿರ್ಮಾಣಗೊಳ್ಳುತ್ತಿರುವ ಮನೆಗಳ ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಸಂಬಂಧಪಟ್ಟಂತೆ ಸಭೆ ನಡೆಸಿ ಸರ್ಕಾರದ ಆದೇಶದಂತೆ ಮನೆಗಳನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವದು ಎಂದರು.
ಈ ಸಂದರ್ಭ ಜಿಲ್ಲಾ ಐ.ಟಿ.ಡಿ.ಪಿ. ಅಧಿಕಾರಿ ಶಿವಕುಮಾರ್, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಪೀಟರ್, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಸಚಿನ್, ಸೋಮವಾರಪೇಟೆ ತಾಲೂಕು ದಂಡಾಧಿಕಾರಿ ಗೋವಿಂದರಾಜು, ಕೂಡಿಗೆ ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲಾ, ಕೂಡಿಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕುಶಾಲನಗರ ಕಂದಾಯ ಪರಿವೀಕ್ಷಕ ಮಧುಸೂದನ್, ಗ್ರಾಮ ಲೆಕ್ಕಿಗ ಗೌತಮ್ ಸೇರಿದಂತೆ ಮತ್ತಿತರರು ಇದ್ದರು.