ಕುಶಾಲನಗರ, ಫೆ. 10: ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ವತಿಯಿಂದ ಪತ್ರಕರ್ತರು ಹಾಗೂ ವಿದ್ಯಾರ್ಥಿಗಳಿಗಾಗಿ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಂಪ್ ಸ್ಮಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಪಂ ಮಾಜಿ ಸದಸ್ಯ ವಿ.ಪಿ. ಶಶಿಧರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜವನ್ನು ಎಚ್ಚರಿಸುವ ಮತ್ತು ತಪ್ಪುಗಳನ್ನು ತಿದ್ದುವ ಮಹತ್ತರ ಕಾರ್ಯ ಪತ್ರಕರ್ತರದ್ದಾಗಿದೆ. ದಿನದ 24 ಗಂಟೆಗಳ ಕಾಲ ಸುದ್ದಿಯ ಜಂಜಾಟದಲ್ಲೇ ಇರುವ ಪತ್ರಕರ್ತರಿಗೆ ಕೊಂಚ ಬಿಡುವು ಹಾಗೂ ಮನರಂಜನೆ ನೀಡುವ ಉದ್ದೇಶದಿಂದ ಇಂತಹ ಕ್ರೀಡಾಕೂಟಗಳು ಅತ್ಯವಶ್ಯಕ ಎಂದರು. ಪ್ರೆಸ್ ಕ್ಲಬ್ ಟ್ರಸ್ಟ್ ಗೌರವಾಧ್ಯಕ್ಷ ಪ್ರಭುದೇವ್ ಮಾತನಾಡಿ, ಪತ್ರಕರ್ತರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ, ಪ್ರೆಸ್ ಕ್ಲಬ್ ಅಧ್ಯಕ್ಷ ಹೆಚ್ ಎಂ ರಘು, ಪತ್ರಕರ್ತರ ಹಿತದೃಷ್ಟಿಯಿಂದ ಪ್ರೆಸ್ ಕ್ಲಬ್ ಸ್ಥಾಪನೆಯಾಯಿತು. ಅಂತಯೇ ಪತ್ರಕರ್ತರಲ್ಲಿ ಕ್ರೀಡಾ ಮನೋಭಾವನೆಯನ್ನು ಬೆಳೆಸುವ ಉದ್ದೇಶದಿಂದ ಇಂತಹ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ .ಮಹಾದೇವ್ ಮಾತನಾಡಿ, ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವದು ಎಂದರು.
ಸಂಚಾರಿ ಪೊಲೀಸ್ ಠಾಣಾಧಿಕಾರಿ ಸೋಮೇಗೌಡ, ಡಯಟ್ ಹಿರಿಯ ಉಪನ್ಯಾಸಕ ಕೆ.ವಿ.ಸುರೇಶ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರಬಾಬು, ಪ್ರೆಸ್ ಕ್ಲಬ್ ಟ್ರಸ್ಟ್ ನ ಕೆ.ಟಿ.ಶ್ರೀನಿವಾಸ್, ಜಯಪ್ರಕಾಶ್ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.