ಮಡಿಕೇರಿ, ಮಾ. 7: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬೆಂಗಳೂರು ಚೈಲ್ಡ್ ರೈಡ್ಸ್ ಟ್ರಸ್ಟ್ ವತಿಯಿಂದ ಮಕ್ಕಳ ಹಕ್ಕುಗಳು ಕಲ್ಪನೆಯಿಂದ ಸಾಧನೆ ಕಡೆಗೆ ಎಂಬ ಶೀರ್ಷಿಕೆಯಡಿ ಮಕ್ಕಳ ಹಕ್ಕುಗಳ ಕುರಿತು ಮಂಥನ ಕಾರ್ಯಕ್ರಮ ನಗರದ ಬಾಲಭವನದಲ್ಲಿ ನಡೆಯಿತು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವಿ.ವಿ. ಮಲ್ಲಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ಮಕ್ಕಳ ಬೆಳವಣಿಗೆ, ಪಾಲನೆ ಮತ್ತು ಪೋಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಕ್ಕಳಿಗೆ ಸರಿಯಾದ ಶಿಕ್ಷಣ ಮತ್ತು ಮಾರ್ಗದರ್ಶನ ನೀಡಬೇಕು. ಇದರಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಕ್ಕಳ ಹಕ್ಕುಗಳ ಕಾರ್ಯಕಾರಿ ನಿರ್ದೇಶಕ ವಾಸುದೇವ ಶರ್ಮ ಮಾತನಾಡಿ, ಮಕ್ಕಳ ಮೇಲೆ ದೌರ್ಜನ್ಯ ನಡೆಸಬಾರದು, ದೌರ್ಜನ್ಯ ನಡೆಸಿದ್ದಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಕ್ಕಳಿಗೆ ಇರುವ ಕಾನೂನುಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಇರಬೇಕು. ಮಕ್ಕಳ ಬೆಳವಣಿಗೆ ಬಗ್ಗೆ ವಿಶೇಷ ಗಮನ ನೀಡಬೇಕು ಎಂದು ಅವರು ತಿಳಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯಕುಮಾರ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸೂರಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಇತರರು ಇದ್ದರು.