ಮಡಿಕೇರಿ, ಮಾ. 28: ರಸ್ತೆ ಸುರಕ್ಷಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ರಾಜಾಸೀಟ್ ಬಳಿಯಲ್ಲಿ ವಾಹನಗಳ ವ್ಯವಸ್ಥಿತ ನಿಲುಗಡೆಗೆ ಅವಕಾಶ ಕಲ್ಪಿಸಲು ಹಾಗೂ ಪಾದಾಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಿ, ಅಪಘಾತಗಳನ್ನು ನಿಯಂತ್ರಿಸಲು ತೀರ್ಮಾನ ಕೈಗೊಳ್ಳಲಾಯಿತು.

2019-20ನೇ ಸಾಲಿಗೆ ರಸ್ತೆ ಸುರಕ್ಷತೆ ಕುರಿತಂತೆ ಕ್ರಿಯಾಯೋಜನೆಯನ್ನು ಸಲ್ಲಿಸಲು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಆದೇಶವಿರುವದರಿಂದ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಭೆಯಲ್ಲಿ ಹಾಜರಿದ್ದ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪೌರಾಯುಕ್ತ ಎಂ.ಎಲ್. ರಮೇಶ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು ಹಾಜರಿದ್ದರು.