ಮಡಿಕೇರಿ, ಮಾ. 29: ಕೊಡಗು-ಮೈಸೂರು ಲೋಕಸಭಾ ಚುನಾವಣಾ ಸಾಮಾನ್ಯ ವೀಕ್ಷಕರಾದ ಕುಲದೀಪ್ ನಾರಾಯಣ ಮತ್ತು ಪೊಲೀಸ್ ವೀಕ್ಷಕರಾದ ಡಾ.ವಿಕಾಸ್ ಪಾಠಕ್ ಅವರು ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಪಿಪ್ರಿಯಾ ಅವರಿಂದ ಮಾಹಿತಿ ಪಡೆದರು.
ನಗರದ ಸುದರ್ಶನ ಅತಿಥಿ ಗೃಹದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆಯನ್ನು ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಮತಗಟ್ಟೆ ಕೇಂದ್ರಗಳ ಸುಸ್ಥಿತಿ, ಚೆಕ್‍ಪೋಸ್ಟ್‍ಗಳ ಕಾರ್ಯ ನಿರ್ವಹಣೆ, ವಲ್ನರಬಲ್ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸುವದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುನ್ನೆಚ್ಚರಿಕೆ ವಹಿಸುವದು, ಸಿ-ವಿಜಿಲ್ ಗಮನಹರಿಸುವದು, ರಾಜಕೀಯ ಪಕ್ಷದ ತಾರಾ ಪ್ರಚಾರಕರ ಸಭೆ- ಸಮಾರಂಭಗಳು ಹಾಗೂ ಮತದಾನದ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವದು ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಲೋಕಸಭಾ ಚುನಾವಣೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳಿಗೆ ಒಂದು ಸುತ್ತಿನ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಗೆ ಹೊಂದಿಕೊಂಡಿರುವ ಅಂತರ ರಾಜ್ಯ ಗಡಿಭಾಗ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಚೆಕ್‍ಪೋಸ್ಟ್ ಸ್ಥಾಪಿಸಲಾಗಿದ್ದು, ಚೆಕ್‍ಪೋಸ್ಟ್‍ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ವಲ್ನರಬಲ್ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಶಾಂತಿಯುತವಾಗಿ ಚುನಾವಣೆ ನಡೆಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.
ಸ್ವೀಪ್ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯಾ ಅವರು ಮತದಾನದ ಮಹತ್ವ ಕುರಿತು ಜಾಥಾ, ರ್ಯಾಲಿ, ಓಟ, ಸಭೆ-ಸಮಾರಂಭ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಬೋಧನೆ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ, ಬೀದಿನಾಟಕ ಹೀಗೆ ನಾನಾ ಚಟುವಟಿಕೆ ಕೈಗೊಳ್ಳಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್ ಅವರು ಲೋಕಸಭಾ ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು. ತಹಶೀಲ್ದಾರರಾದ ನಟೇಶ್, ಗೋವಿಂದ ರಾಜು, ವೀಕ್ಷಕರ ನೋಡಲ್ ಅಧಿಕಾರಿಗಳಾದ ನಟರಾಜು, ಪ್ರಮೋದ್ ಇತರರು ಇದ್ದರು.