ಕೂಡಿಗೆ, ಜು. 12: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ 2019-20ನೇ ಸಾಲಿನ ಅನುದಾನಿತ ಐಸಿಇ ಮತ್ತು ಬಿಸಿಸಿ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ವಹಿಸಿದ್ದರು. ನಂತರ ಮಾತನಾಡಿದ ಅವರು ಮಹಿಳೆಯರು ತಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಆರೋಗ್ಯ ಇಲಾಖೆಯ ಮಾಹಿತಿಗಳನ್ನು ಪಡೆದು ಮಕ್ಕಳ ಪೋಷಣೆಯಲ್ಲಿ ತೊಡಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವಿಚಂದ್ರ ಮಾತನಾಡಿ, ಆರೋಗ್ಯದ ಬಗ್ಗೆ ಮಾಹಿತಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ಶಿಶುಗಳ ಪಾಲನೆ ಮತ್ತು ಬಾಣಂತಿಯರ ಆರೈಕೆ, ಆಹಾರ ಸೇವನೆಯ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಮಾತನಾಡಿ, ಆರೋಗ್ಯ ಇಲಾಖೆಯಿಂದ ಸದ್ಬಳಸಿಕೊಳ್ಳಬಹುದಾದ ವಿಷಯದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಆರೋಗ್ಯ ಸಹಾಯಕ ಚಂದ್ರೇಶ್, ಸಕೀನಾ ಸೇರಿದಂತೆ ಮತ್ತಿತರರು ಇದ್ದರು. ಗ್ರಾ.ಪಂ. ವ್ಯಾಪ್ತಿಯ 25ಕ್ಕೂ ಹೆಚ್ಚು ಆರೋಗ್ಯ ಶಿಶುಗಳ ಪ್ರದರ್ಶನ ನಡೆಯಿತು. ನಂತರ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ವಿತರಿಸಲಾಯಿತು.