ಹೆಬ್ಬಾಲೆ ಸೆ. 19: ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ರಮೇಶ್ ಹಾಗೂ ಮಂಜುನಾಥ್ ಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ ರಮೇಶ್ ಅವರು ಅಧ್ಯಕ್ಷಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜುನಾಥ್ ಅವರು ಮುಂದಿನ 9 ತಿಂಗಳ ಕಾಲಾವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.

ಈ ಸಂದರ್ಭ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಹಳ್ಳಿಗಳು ಇಂದಿಗೂ ಕೂಡ ಮೂಲಭೂತ ಸೌಲಭ್ಯಗಳ ಸಮಸ್ಯೆಯನ್ನು ಎದುರಿಸುತ್ತಿವೆ. ಎಲ್ಲ ಹಳ್ಳಿಗಳಿಗೂ ಅಗತ್ಯ ಮೂಲಭೂತ ಸೌಲಭ್ಯಗಳು ಮತ್ತು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕುಡಿಯುವ ನೀರು, ವಿದ್ಯುತ್ ದೀಪ, ರಸ್ತೆ. ಇನ್ನಿತರ ಅಭಿವೃದ್ಧಿ ಕಾರ್ಯಗಳ ಕಡೆಗೆ ಹೆಚ್ಚಿನ ಗಮನ ನೀಡುವದಲ್ಲದೇ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುವದಾಗಿ ಹೇಳಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯರಾದ ರಮೇಶ್, ಶೃತಿ, ವೀರಭದ್ರಪ್ಪ, ಗೀತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಡಿ. ಹರೀಶ್ ಸೇರಿದಂತೆ ಸದಸ್ಯರು ಹಾಜರಿದ್ದರು.